ನವದೆಹಲಿ, ಏ.19-ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಮತ್ತು ಮಾಧ್ಯಮ ಘಟಕದ ಸಂಚಾಲಕಿ ಪ್ರಿಯಾಂಕಾ ಚತುರ್ವೇದಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಪ್ರಿಯಾಂಕಾ ಪಕ್ಷ ತೊರೆದಿರುವುದು ಕಾಂಗ್ರೆಸ್ ಹಿನ್ನೆಡೆಯಾಗಿದೆ.
ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹಿಡಿದು ಎಲ್ಲ ಹುದ್ದೆಗಳಿಗೂ ರಾಜೀನಾಮೆ ನೀಡಿರುವ ಅವರು ತಮ್ಮ ತ್ಯಾಗಪತ್ರವನ್ನು ಕಾಂಗ್ರೆಸ್ ವರಿಷ್ಠರಿಗೆ ರವಾನಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ನಲ್ಲಿ ತಾವು ಹೊಂದಿದ್ದ ಸ್ಥಾನದ ಪದನಾಮವನ್ನು ಸ್ಪಷ್ಟವಾಗಿ ಟ್ವಿಟರ್ನಲ್ಲಿ ನಮೂದಿಸುತ್ತಿದ್ದ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅವುಗಳನ್ನು ತೆಗೆದು ಹಾಕಿದ್ದಾರೆ.
ಉತ್ತರ ಪ್ರದೇಶದ ಮಥುರಾದಲ್ಲಿ ನಡೆದ ಸುದ್ದಿಗೋಷ್ಠಿ ಸಂದರ್ಭದಲ್ಲಿ ಪಕ್ಷದ ಕೆಲವು ಕಾರ್ಯಕರ್ತರು ತಮ್ಮೊಂದಿಗೆ ಅನುಚಿತವಾಗಿ ನಡೆದುಕೊಂಡು ಪ್ರಾಣ ಬೆದರಿಕೆ ಹಾಕಿದ್ದ ಬಗ್ಗೆ ಪ್ರಿಯಾಂಕಾ ಚತುರ್ವೇದಿ ಮನನೊಂದಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ತಿಳಿಸಿದ್ದರೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳದ ಬಗ್ಗೆ ಕುಪಿತಗೊಂಡಿದ್ದ ಅವರು ಕಾಂಗ್ರೆಸ್ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದರ ಬೆನ್ನಲ್ಲೇ ಇಂದು ಪಕ್ಷದ ಎಲ್ಲ ಹುದ್ದೆಗಳಿಗೂ ಅವರು ರಾಜೀನಾಮೆ ನೀಡಿದ್ದಾರೆ.