ಕೊಲಂಬೋದಲ್ಲಿ ಸರಣಿ ಬಾಂಬ್ ಸ್ಪೋಟ-ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಮಾಜಿ ಪ್ರಧಾನಿ ದೇವೇಗೌಡ-ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಏ.22-ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ರಾಜ್ಯದ ನಾಲ್ವರು ಮೃತಪಟ್ಟಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಫೋಟದ ಹೇಯ ಕೃತ್ಯದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿರುವ ದೇವೇಗೌಡರು ಬಾಂಬ್ ಸ್ಫೋಟದ ಸಂದರ್ಭದಲ್ಲಿ ಗಾಯಗೊಂಡಿರುವವರು ಶೀಘ್ರ ಚೇತರಿಸಿಕೊಳ್ಳಲಿ.ಕಣ್ಮರೆಯಾಗಿರುವ ಕನ್ನಡಿಗರು ಹಾಗೂ ಭಾರತೀಯರು ಶೀಘ್ರ ಸುರಕ್ಷಿತವಾಗಿ ಮರಳುವಂತಾಗಲಿ ಪ್ರಾರ್ಥಿಸಿದ್ದಾರೆ.

ಭಯೋತ್ಪಾದಕರ ಬಾಂಬ್ ಸ್ಫೋಟದಲ್ಲಿ 200ಕ್ಕೂ ಹೆಚ್ಚು ಅಮಾಯಕರು ಬಲಿಯಾಗಿರುವ ಹೇಯ ಕೃತ್ಯವನ್ನು ತೀವ್ರವಾಗಿ ಖಂಡಿಸುವುದಾಗಿ ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಮೃತಪಟ್ಟವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತಪಟ್ಟವರ ಕುಟುಂಬದ ಬೆಂಬಲಕ್ಕೆ ನಾವಿದ್ದು, ಭಗವಂತನು ಮೃತರ ಕುಟುಂಬ ವರ್ಗದವರಿಗೆ ಈ ಆಘಾತದ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಜೆಡಿಎಸ್‍ನ ಏಳು ಮಂದಿ ತಂಡ ನಾಪತ್ತೆಯಾಗಿದ್ದು, ಅವರಲ್ಲಿ ನಾಲ್ವರು ಮೃತಪಟ್ಟಿರುವುದು ದೃಢಪಟ್ಟಿದೆ. ಇದು ಅತ್ಯಂತ ದುಃಖಕರ ಸಂಗತಿ. ಉಳಿದ ಮೂವರು ಇದುವರೆಗೂ ಪತ್ತೆಯಾಗಿಲ್ಲ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿಯು, ದೆಹಲಿಯ ಕರ್ನಾಟಕ ಭವನ, ಮೃತಪಟ್ಟವರ ಮತ್ತು ಕಾಣೆಯಾದವರೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.

ಕೊಲಂಬೋ ಪ್ರವಾಸದಲ್ಲಿದ್ದ ಜೆಡಿಎಸ್‍ನ ಕಾರ್ಯಕರ್ತರು ನಾಪತ್ತೆಯಾಗಿದ್ದು, ಅವರ ಪತ್ತೆ ಕುರಿತಂತೆ ಭಾರತದ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ