ಹಾಸನ, ಏ.28-ಜಿಲ್ಲೆಯಲ್ಲಿ ಆನೆಗಳ ಉಪಟಳ ಮುಂದುವರೆದಿದ್ದು, ಇಂದು ಬೆಳ್ಳಂಬೆಳಗ್ಗೆ ಗ್ರಾಮಗಳಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಸಕಲೇಶಪುರ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಒಂಟಿ ಆನೆಯೊಂದು ಓಡಾಡುತ್ತಿದ್ದು, ಮನೆಯಿಂದ ಹೊರಬರಲು ಗ್ರಾಮಸ್ಥರು ಹೆದರುತ್ತಿದ್ದಾರೆ.
ವಂಕರವಳ್ಳಿ, ಹೆಗ್ಗೊವೆ, ಮಾಗಲು, ಬಾಗೆ, ಯಳಸೂರು ಭಾಗಗಳಲ್ಲಿ ಕಾಡಾನೆಗಳ ಹಾವಳಿ ಸಾಮಾನ್ಯವಾಗಿದೆ. ಕಳೆದ 3 ವರ್ಷಗಳಿಂದ ಆನೆ ದಾಳಿಗೆ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಆನೆ ಹಾವಳಿಯನ್ನು ಶಾಶ್ವತವಾಗಿ ತಪ್ಪಿಸುವ ಯೋಜನೆ ಆನೆ ಕಾರಿಡಾರ್ ನೆನೆಗುದಿಗೆ ಬಿದ್ದಿದೆ. ಸರ್ಕಾರಗಳು ಕೇವಲ ಆಶ್ವಾಸನೆ ನೀಡುತ್ತಾ ಬಂದಿವೆ. ಕಾರಿಡಾರ್ ನಿರ್ಮಾಣಕ್ಕೆ ಭೂಮಿ ಗುರುತಿಸಲಾಗಿದೆ. ಇದಕ್ಕೆ ರೈತರೂ ಸಹ ಒಪ್ಪಿಗೆ ನೀಡಿದ್ದಾರೆ. ಆದರೂ ಸಹ ಕಾರಿಡಾರ್ ನಿರ್ಮಾಣ ವಿಳಂಬವಾಗುತ್ತಿದ್ದು, ಶೀಘ್ರ ಆನೆ ಕಾರಿಡಾರ್ ನಿರ್ಮಿಸಬೇಕೆಂದು ಪರಿಸರವಾದಿಗಳು ಒತ್ತಾಯಿಸಿದ್ದಾರೆ.