ಇಂದಿನಿಂದ ಪ್ರಾರಂಭವಾದ ಸಿಇಟಿ ಪರೀಕ್ಷೆ

ಬೆಂಗಳೂರು, ಏ.29- ಇಂದಿನಿಂದ ಮೂರು ದಿನಗಳ ಕಾಲ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆ ನಡೆಯುತ್ತಿದೆ.

ರಾಜ್ಯದ 431 ಕೇಂದ್ರಗಳಲ್ಲಿ 1,94,311 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಇಂದು ಬೆಳಗ್ಗೆ 10.30ರಿಂದ 11.50ರವರೆಗೆ ಜೀವ ಶಾಸ್ತ್ರ , ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆಯುತ್ತವೆ. ನಾಳೆ ಬೆಳಗ್ಗೆ 10.30ರಿಂದ ಬೆಳಗ್ಗೆ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿವೆ.

ಮೇ 1ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು , ರಾಜ್ಯದ 2,200 ವಿದ್ಯಾರ್ಥಿಗಳು ಕನ್ನಡ ಪರೀಕ್ಷೆ ಬರೆಯುತ್ತಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿ ಲೇಖನಿ ಮತ್ತು ಪರೀಕ್ಷಾ ಉಪಕರಣಗಳನ್ನು ಹೊರತುಪಡಿಸಿ ಯಾವುದೇ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವುದನ್ನು ನಿಷೇಧಿಸಿದೆ.

ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕೈ ಗಡಿಯಾರ ಕಟ್ಟಿಕೊಳ್ಳುವಂತಿಲ್ಲ. ಮೊಬೈಲ್, ಟ್ಯಾಬ್ಲೆಡ್ ಹಾಗೂ ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.

ರಾಜ್ಯಾದ್ಯಂತ ನಡೆಯುತ್ತಿರುವ ಸಿಇಟಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ವ್ಯವಸ್ಥೆ ಮಾಡಲಾಗಿದ್ದು , ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಬಹುದು ಎಂದು ಪ್ರಾಧಿಕಾರ ತಿಳಿಸಿದೆ.

ಪರೀಕ್ಷಾ ಕೇಂದ್ರಗಳ ಸಿಬ್ಬಂದಿಯನ್ನು ಕಡಿತಗೊಳಿಸುವ ಉದ್ದೇಶದಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ 4 ವಿದ್ಯಾರ್ಥಿಗಳನ್ನು ಹೆಚ್ಚಳ ಮಾಡಲಾಗಿದೆ. ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಮೈಸೂರಿನಲ್ಲಿ 10,463 ವಿದ್ಯಾರ್ಥಿಗಳು: ಇಂದಿನಿಂದ ಆರಂಭವಾದ ಸಿಇಟಿ ಪರೀಕ್ಷೆ ಯಲ್ಲಿ ಮೈಸೂರಿನ 21 ಕೇಂದ್ರಗಳಲ್ಲಿ ಒಟ್ಟು 10,463 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ