ಹುಬ್ಬಳ್ಳಿ/ಕಲಬುರಗಿ, ಏ,29- ಕುಂದಗೋಳ, ಚಿಂಚೋಳಿ ಉಪಚುನಾವಣೆ ನಾಮಪತ್ರ ಭರಾಟೆ ಜೋರಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ತಮ್ಮ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದರು.
ಉಪಚುನಾವಣೆಗೆ ಬಿಜೆಪಿ ಪಕ್ಷದ ಹಾಗೂ ದೋಸ್ತಿ ನಾಯಕರ ದಂಡೇ ದೌಡಾಯಿಸಿತ್ತು. ಲೋಕಸಭೆ ಚುನಾವಣೆ ಕಾವು ಮುಗಿಯುತ್ತಿದ್ದಂತೆ ಈ ಎರಡೂ ಕ್ಷೇತ್ರಗಳಲ್ಲಿ ಉಪಚುನಾವಣೆ ಕಾವು ಏರತೊಡಗಿದೆ.
ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಇಂದು ಪಕ್ಷದಿಂದ ಬಿ ಫಾರಂ ಪಡೆದ ಅಭ್ಯರ್ಥಿಗಳು ಹಾಗೂ ಪಕ್ಷೇತರ ಹಲವರು, ನಾಮಪತ್ರ ಸಲ್ಲಿಸಿದರು.
ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾದ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ತಹಸೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ಗಾಳಿ ದುರ್ಗಮ್ಮ ದೇವಸ್ಥಾನದಿಂದ ಭಾರೀ ಮೆರವಣಿಗೆಯಲ್ಲಿ ಸಾಗಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಕುಂದಗೋಳ ಚುನಾವಣೆಯ ಉಸ್ತುವಾರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್, ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕ ಶಾಸಕರು, ಮುಖಂಡರು ಹಾಗೂ ಅಪಾರ ಪ್ರಮಾಣದ ಕಾರ್ಯಕರ್ತರು ಭಾಗವಹಿಸಿದ್ದರು.
ಅತ್ತ ಬಿಜೆಪಿಯ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಸಹ ದುರ್ಗಮ್ಮ ದೇವಸ್ಥಾನದಿಂದ ಬೃಹತ್ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಷಿ, ಸ್ಥಳೀಯ ಶಾಸಕರು, ಬಿಜೆಪಿ ಮುಖಂಡರು ಸೇರಿದಂತೆ ಅನೇಕ ನಾಯಕರು ಸಾಥ್ ನೀಡಿದರು.
ಚಿಂಚೋಳಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾದ ಸುಭಾಷ್ ರಾಥೋಡ್ ಅವರು ಮಧ್ಯಾಹ್ನ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಇದಕ್ಕೂ ಮುನ್ನ ಸಚಿವ ಪ್ರಿಯಾಂಕ ಖರ್ಗೆ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಅಲ್ಲಂಪ್ರಭು ಪಾಟೀಲ್, ಮಾಜಿ ಸಚಿವ ಶರಣುಪ್ರಕಾಶ್ಪಾಟೀಲ್ ಸೇರಿದಂತೆ ಅನೇಕ ಮುಖಂಡರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಮತ ಪ್ರಚಾರ ನಡೆಸಿದರು.
ಇನ್ನು ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರ ಪುತ್ರ ಅವಿನಾಶ್ ಜಾಧವ್ ಅವರು ಕೂಡ ಭಾರೀ ಮೆರವಣಿಗೆಯಲ್ಲಿ ಸಾಗಿ ಬಂದು ನಾಮಪತ್ರ ಸಲ್ಲಿಸಿದರು.
ಬಾಬುರಾವ್ ಚಿಂಚನಸೂರ್, ಮಾಲಿಕಯ್ಯ ಗುತ್ತೇದಾರ್ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.
ಎರಡೂ ಕ್ಷೇತ್ರಗಳಲ್ಲಿ ನಾಮಪತ್ರ ಭರಾಟೆ ಜೋರಾಗಿದ್ದು ಶಿವಳ್ಳಿ ಅವರ ಸಾವಿನಿಂದ ತೆರವಾದ ಕುಂದಗೋಳ ಕ್ಷೇತ್ರ, ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾದ ಚಿಂಚೋಳಿ ಕ್ಷೇತ್ರಕ್ಕೆ ಮೇ 19ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆ ಮೈತ್ರಿ ಸರ್ಕಾರಕ್ಕೆ ಮತ್ತು ಬಿಜೆಪಿಗೆ ಅತ್ಯಂತ ಮಹತ್ವದ್ದಾಗಿದೆ. ಪ್ರಸ್ತುತ 104 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಈ ಎರಡು ಸ್ಥಾನಗಳನ್ನು ತನ್ನದಾಗಿಸಿಕೊಂಡರೆ 106ಕ್ಕೇರುತ್ತದೆ. ಆಡಳಿತಾರೂಢ ಪಕ್ಷ ಈ ಎರಡೂ ಸ್ಥಾನಗಳನ್ನು ಕಳೆದುಕೊಂಡರೆ ತನ್ನ ಬಲ ಕುಗ್ಗುತ್ತದೆ. ಹಾಗಾಗಿ ಈ ಉಪಚುನಾವಣೆಯ ಫಲಿತಾಂಶ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಘಟಾನುಘಟಿಕಗಳು ಚುನಾವಣೆಯ ಹೊಣೆ ಹೊತ್ತಿದ್ದಾರೆ. ಹಲವು ನಾಯಕರು ಅಲ್ಲೇ ಬೀಡು ಬಿಟ್ಟಿದ್ದಾರೆ.