ಬೆಂಗಳೂರು, ಏ.29-ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಲೆನಾಡು ಕರಾವಳಿ ಭಾಗಗಳು ಸೇರಿದಂತೆ ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯಭಾಸ್ಕರ್ ಅವರಿಗೆ ಸೂಚನೆ ನೀಡಿದ್ದಾರೆ.
ನಿನ್ನೆ ಮುಖ್ಯ ಕಾರ್ಯದರ್ಶಿಯವರೊಂದಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿಗಳು ಮಾತನಾಡಿ, ಈ ಬಾರಿ ಮಳೆಗಾಲದಲ್ಲಿ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಕಳೆದ ವರ್ಷದ ಮಳೆಗಾಲದಲ್ಲಿ ಕೊಡಗು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿ ಅನಾಹುತಗಳು ಉಂಟಾಗಿ ಜನರು ಸಂಕಷ್ಟ ಎದುರಿಸುವಂತಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಮಳೆಗಾಲಕ್ಕೂ ಮುನ್ನ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಲೋಕಸಭಾ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅವಕಾಶವಿಲ್ಲ. ಹೀಗಾಗಿ ಮುಖ್ಯ ಕಾರ್ಯದರ್ಶಿಗಳು ಅಧಿಕಾರಿಗಳ ತಂಡ ರಚಿಸಿ ಜಿಲ್ಲೆಗಳಲ್ಲಿ ಮುಂಗಾರಿನ ಪೂರ್ವಸಿದ್ಧತೆಯನ್ನು ಪರಿಶೀಲಿಸುವಂತೆ ತಿಳಿಸಿದ್ದಾರೆ.
ಜೊತೆಗೆ ಕಳೆದ ವರ್ಷ ಅತಿವೃಷ್ಟಿಗೀಡಾಗಿದ್ದ ಕೊಡಗು ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮೂಲ ಸೌಕರ್ಯ ಅಭಿವೃದ್ಧಿ, ದುರಸ್ತಿ, ವಸತಿ ಕಾರ್ಯಗಳ ಸಮರ್ಪಕ ಅನುಷ್ಠಾನವನ್ನು ಖಾತ್ರಿ ಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.