ಡಿಕೆಶಿ ‘ಉತ್ತರ’ ದಂಡಯಾತ್ರೆಗೆ ಬ್ರೇಕ್ ಹಾಕಲು ಮುಂದಾದ್ರಾ ಸಿದ್ದರಾಮಯ್ಯ ಶಿಷ್ಯರು!

ಬೆಂಗಳೂರು: ಕರ್ನಟಕದ ಲೋಕಸಭಾ ಚುನಾವಣೆ ಮುಗಿದು, ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಅಡಗಿಕೊಂಡಿದೆ. ಇದೀಗ ರಾಜ್ಯದಲ್ಲಿ ನಡೆಯುತ್ತಿರುವ ಕುಂದಗೋಳ ಮತ್ತು ಚಿಂಚೋಳಿಯ ಉಪ ಚುನವಣೆಯ ಕಾವು ಏರತೊಡಗಿದೆ. ಕುಂದಗೋಳ ಕಾಂಗ್ರೆಸ್ ಅಂಗಳದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಶಿವಾನಂದ್ ಬೆಂತೂರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕುಂದಗೋಳ ಚುನಾವಣೆಯ ಜವಾಬ್ದಾರಿಯನ್ನು ಕೈ ಕಮಾಂಡ್ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದೆ. ಉತ್ತರ ಕರ್ನಾಟಕದ ದಂಡಯಾತ್ರೆ ಕೈಗೊಂಡಿರುವ ಡಿ.ಕೆ.ಶಿವಕುಮಾರ್ ತಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯರೇ ಮುಂದಾದ್ರೆ ಎಂಬ ಮಾತುಗಳು ಕಾಂಗ್ರೆಸ್ ಅಂಗಳದಲ್ಲಿ ಕೇಳಿ ಬರುತ್ತಿವೆ.

ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾದ ಕುಂದಗೋಳ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಸಿ.ಎಸ್.ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್ ನೀಡಿದೆ. ಕುಸುಮಾ ಶಿವಳ್ಳಿಗೆ ಟಿಕೆಟ್ ನೀಡಿದಕ್ಕೆ ಸ್ಥಳೀಯ ಕಾರ್ಯಕರ್ತರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಬಂಡಾಯವನ್ನೇ ಅಸ್ತ್ರವನ್ನಾಗಿ ಬಳಸಿಕೊಂಡು ಜಾರಕಿಹೊಳಿ ಸಹೋದರು ಕುಸುಮಾ ಶಿವಳ್ಳಿ ಅವರನ್ನು ಸೋಲಿಸಲು ತೆರೆಮರೆಯಲ್ಲಿ ತಂತ್ರ ರೂಪಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಕೆಶಿ ಟಾರ್ಗೆಟ್ ಯಾಕೆ?
ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕರಾಗಿರುವ ಡಿ.ಕೆ.ಶಿವಕುಮಾರ್ ಹೆಗಲಿಗೆ ಕುಂದಗೋಳದ ಜವಾಬ್ದಾರಿ ನೀಡಲಾಗಿದೆ. ಒಂದು ಕುಂದಗೋಳದಲ್ಲಿ ಕುಸುಮಾ ಶಿವಳ್ಳಿ ಗೆಲುವು ಸಾಧಿಸಿದ್ರೆ ಜಯದ ಕ್ರೆಡಿಟ್ ಶಿವಕುಮಾರ್ ಅವರಿಗೆ ಸಿಗಲಿದೆ. ಈ ಒಂದು ಗೆಲುವಿನ ಮೂಲಕ ಉತ್ತರ ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ಹಿಡಿತ ಹೆಚ್ಚಾಗುತ್ತೆ ಅನ್ನೋ ಭಯ ಜಾರಕಿಹೊಳಿ ಸೋದರರು ಮತ್ತು ಸ್ಥಳೀಯ ನಾಯಕರಲ್ಲಿ ಮೂಡಿದೆ ಎನ್ನಲಾಗುತ್ತಿದೆ. ಹೀಗಾಗಿ ತಮ್ಮದೇ ಅಭ್ಯರ್ಥಿಯನ್ನು ಸೋಲಿಸಲು ಸ್ಥಳೀಯ ನಾಯಕರು ಮುಂದಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕುಸುಮಾ ಶಿವಳ್ಳಿ ಸೋಲು ಕಂಡರೆ ಸಿದ್ದರಾಮಯ್ಯರಿಗೂ ಮುಖಭಂಗ, ಡಿಕೆಶಿಗೂ ಭಾರೀ ಹಿನ್ನಡೆ ನಿಶ್ಚಿತ. ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟದ ಸಮಯದಲ್ಲಿಯೂ ಡಿ.ಕೆ.ಶಿವಕುಮಾರ್ ಮಧ್ಯಸ್ಥಿಕೆ ವಹಿಸಿದ್ದರು. ಅಂದು ಸಹ ಜಾರಕಿಹೊಳಿ ಸೋದರರು ಬಹಿರಂಗವಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ