ಬೆಂಗಳೂರು: ರಂಗಭೂಮಿ ಕಲಾವಿದ ಮಾಸ್ಟರ್ ಹಿರಣಯ್ಯ ಇಂದು ವಿಧಿವಶರಾಗಿದ್ದಾರೆ.
84 ವರ್ಷದ ಮಾಸ್ಟರ್ ಹಿರಣಯ್ಯ ನಾಲ್ಕೈದು ದಿನಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ, ಮಾಸ್ಟರ್ ಹಿರಣಯ್ಯ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.
ಲಂಚಾವತಾರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.
ಮಾಸ್ಟರ್ ಹಿರಣ್ಣಯ್ಯನವರು ಬಾಲ್ಯದಲ್ಲಿರುವಾಗ ಅವರ ತಂದೆ ಮದರಾಸಿನಲ್ಲಿ ಬದುಕನ್ನರಸಿ ತಮ್ಮ ಕುಟುಂಬ ಸಮೇತರಾಗಿ ವಾಸವಾಗಿದ್ದರು. ಹೀಗಾಗಿ ಅಲ್ಲಿ ಅವರಿಗೆ ತಮಿಳು, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳ ಅಭ್ಯಾಸವಾಯಿತು. ಜೊತೆ ಜೊತೆಗೆ ಮನೆಯಲ್ಲಿ ಕನ್ನಡದ ಬಾಯಿಪಾಠ ಮತ್ತು ಸಂಸ್ಕೃತದ ಸ್ತೋತ್ರ ಪಾಠ ಕೂಡಾ ನಡೆಯಿತು. ನಂತರದಲ್ಲಿ ಮೈಸೂರಿಗೆ ಬಂದು ಸೇರಿದ್ದು ಬನುಮಯ್ಯ ಮಾಧ್ಯಮಿಕ ಶಾಲೆ. `ಸಾಧ್ವಿ’, `ಮೈಸೂರು ಪತ್ರಿಕೆ’ಯನ್ನು ಮನೆ ಮನೆಗೆ ಹಂಚಿ ಆ ಸಂಪಾದನೆಯಿಂದ ಶಾಲಾ ಪರೀಕ್ಷೆಗಳ ಶುಲ್ಕಕ್ಕೆ ದಾರಿ ಮಾಡಿಕೊಂಡಿದ್ದರು.