ಇದೇ 7ರಂದು ಬಸವ ಜಯಂತಿ ಕಾರ್ಯಕ್ರಮ

ಬೆಂಗಳೂರು, ಮೇ 4- ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಬಸವ ಜಯಂತಿ ಕಾರ್ಯಕ್ರಮವನ್ನು ಇದೆ 7ರಂದು ಸದಾಶಿವ ನಗರದ ಪೂಜ್ಯ ಹಾನಗಲ್ ಕುಮಾರಸ್ವಾಮಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಘಟಕ ಅಧ್ಯಕ್ಷ ಎಸ್.ಗುರುಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಂಗವಾಗಿ ಅಂದು ಮಧ್ಯಾಹ್ನ 2 ಗಂಟೆಗೆ ಭಾಷ್ಯಂ ಸರ್ಕಲ್ ಮೂಲಕ ಜಗದ್ಗುರು ರೇಣುಕಾರ್ಯ ಹಾನಗಲ್ ಮಹಾಸ್ವಾಮೀಜಿ ಹಾಗೂ ಸಿದ್ಧಗಂಗಾ ಮಠಾಧ್ಯಕ್ಷರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಗಳ ಉತ್ಸವವನ್ನು ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಹೊರಟು ಮಹಾಸಭಾದ ಕೇಂದ್ರ ಕಚೇರಿಗೆ ತಲುಪುವುದಾಗಿ ತಿಳಿಸಿದರು.

ಉತ್ಸವವನ್ನು ಬಿಬಿಎಂಪಿ ಮಹಾಪೌರರಾದ ಗಂಗಾಂಬಿಕೆ ಮಲ್ಲಿಕಾರ್ಜುನ್ ನೆರವೇರಿಸಲಿದ್ದಾರೆ. ಕಾರ್ಯಕ್ರಮವನ್ನು ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಾಸಭೆ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಎನ್. ಜಯಲಿಂಗಪ್ಪ , ಸದಸ್ಯ ಹೆಚ್.ಎಂ. ರೇಣುಕ ಪ್ರಸನ್ನ ಸೇರಿದಂತೆ ಹಲವಾರು ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಒಂದು ಸಾವಿರ ವಿದ್ಯಾರ್ಥಿನಿಯರಿಗೆ ಉಚಿತ ವಸತಿ ನಿಲಯ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಲುವಾಗಿ ಸೂಕ್ತ ತರಬೇತಿ ಕೇಂದ್ರ , ಶೆ.80ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುವ ಗುರಿಯನ್ನು ನಮ್ಮ ಮಹಾಸಭಾ ಹೊಂದಿದೆ ಎಂದರು.

ಬೆಂಗಳೂರು ನಗರ ಜಿಲ್ಲಾ ಘಟಕ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಮಹಿಳಾ ಮತ್ತು ಯುವ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ