ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಸಿ.ಎಂ. ಮಾಸ್ಟರ್ ಪ್ಲ್ಯಾನ್

ಬೆಂಗಳೂರು, ಮೇ 5-ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದು, ಮೇ 8ರ ನಂತರ ಶಾಸಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಕಾಂಗ್ರೆಸ್‍ನ ಕೆಲವು ಶಾಸಕರು ನೀಡಿದ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಜೊತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಆಪರೇಷನ್ ಕಮಲಕ್ಕೆ ಆಡಳಿತ ಪಕ್ಷದ ಶಾಸಕರು ಒಳಗಾಗದಂತೆ ತಡೆಯಲು ಈ ಪ್ಲ್ಯಾನ್ ರೂಪಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೇ 8 ರಿಂದ ಪ್ರತಿದಿನ ಉಭಯ ಪಕ್ಷಗಳ 10 ರಿಂದ 12 ಶಾಸಕರೊಂದಿಗೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಲಿದ್ದಾರೆ. ಪ್ರತಿ ಶಾಸಕರ ಸಮಸ್ಯೆ ಆಲಿಸುವುದಲ್ಲದೆ, ಆಯಾ ಕ್ಷೇತ್ರಕ್ಕೆ ಅನುದಾನ ಹಂಚಿಕೆ ಕುರಿತಂತೆಯೂ ಚರ್ಚೆ ನಡೆಸಲಿದ್ದಾರೆ.

ಮುಂದಿನ ನಾಲ್ಕು ವರ್ಷಕ್ಕೆ ಅನ್ವಯವಾಗುವಂತೆ ಯೋಜನೆ ರೂಪಿಸುವ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಾಗುತ್ತದೆ.ಆಡಳಿತ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮಸ್ಯೆಗೆ ಸ್ಪಂದಿಸುವುದರಿಂದ ಆಪರೇಷನ್ ಕಮಲಕ್ಕೆ ಒಳಗಾಗುವುದನ್ನು ತಪ್ಪಿಸಬಹುದಾಗಿದೆ. ಅಲ್ಲದೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲದೆ ಮುಂದುವರೆಯಲು ಅನುಕೂಲವಾಗಲಿದೆ ಎಂಬ ಶಾಸಕರ ಸಲಹೆಗೆ ಸಮ್ಮತಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ