ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಸರಕು ಸಾಗಣೆ ವಾಹನಗಳಲ್ಲಿ ಕರೆದೊಯ್ಯುವುದು ಕಾನೂನುಬಾಹಿರ

ಬೆಂಗಳೂರು, ಮೇ 5- ಲಗೇಜು ಆಟೋ, ಟ್ರ್ಯಾಕ್ಟರ್, ಟೆಂಪೋ, ಸೇರಿದಂತೆ ಇನ್ನಿತರ ಸರಕು ಸಾಗಣೆ ವಾಹನಗಳಲ್ಲಿ ಕಾನೂನು ಬಾಹಿರವಾಗಿ ಕೂಲಿ ಕಾರ್ಮಿಕರನ್ನು ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಪ್ರಯಾಣಿಕರಂತೆ ಕರೆದೊಯ್ದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ತಿಳಿಸಿದರು.

ದೇವನಹಳ್ಳಿ ತಾಲ್ಲೂಕು, ಚಪ್ಪರಕಲ್ಲು ಬಳಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರಕುಗಳನ್ನು ಹೊತ್ತೊಯ್ಯುವ ಲಗೇಜು ಆಟೋ, ಟ್ರ್ಯಾಕ್ಟರ್, ಟೆಂಪೋಗಳಲ್ಲಿ ಕೂಲಿ ಕಾರ್ಮಿಕರನ್ನು, ಗಾರ್ಮೆಂಟ್ಸ್ ಕಾರ್ಖಾನೆಗಳ ಉದ್ಯೋಗಿಗಳನ್ನು, ಶಾಲಾ,ಕಾಲೇಜು ವಿದ್ಯಾರ್ಥಿಗಳನ್ನು ಸಾಗಾಟ ಮಾಡುತ್ತಿದ್ದು ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಜನರನ್ನು ಸಾಗಾಟ ಮಾಡುವ ಸರಕು ವಾಹನಗಳನ್ನು ವಶಕ್ಕೆ ಪಡೆದು ಸಾರಿಗೆ ಕಾಯ್ದೆ ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸರಲ್ಲದೆ ಇಂತಹ ವಾಹನಗಳ ಲೈಸನ್ಸ್ ರದ್ದು ಮಾಡಬೇಕೆಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಒಟ್ಟು 660 ಕಾರ್ಖಾನೆಗಳು, 8084 ನೋಂದಣಿಯಾಗಿರುವ ಒಟ್ಟು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, 14 ಪ್ರಮುಖ ಕಟ್ಟಡ ನಿರ್ಮಾಣ ಸಂಸ್ಥೆಗಳಿದ್ದು, ಒಟ್ಟಾರೆ 1,58692 ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾರ್ಮಿಕರ ಸುರಕ್ಷತೆ ವಹಿಸುವಂತೆ ಕೈಗಾರಿಕಾ ಮಾಲೀಕರುಗಳಿಗೆ, ವಾಣಿಜ್ಯ ಸಂಸ್ಥೆಗಳಿಗೆ ಪತ್ರ ಬರೆಯಲಾಗುವುದೆಂದು ತಿಳಿಸಿದರು.

ಮೇ 13 ರಂದು ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ, ಮೇ 20 ರಂದು ನೆಲಮಂಗಲದ ದಾಬಸ್‍ಪೇಟೆಯಲ್ಲಿ, ಮೇ 27 ರಂದು ಹೊಸಕೋಟೆ ಕೈಗಾರಿಕಾ ಪ್ರದೇಶದಲ್ಲಿ ರ್ಯಾಲಿ, ಕೈಗಾರಿಕಾ ಮಾಲೀಕರುಗಳು ಹಾಗೂ ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಸಭೆ, ಅರಿವು ಕಾರ್ಯಕ್ರಮ ಮತ್ತು ಜೂನ್ 3 ರಂದು ದೇವನಹಳ್ಳಿಯಲ್ಲಿ ಕೈಗಾರಿಕಾ ಮಾಲೀಕರುಗಳು ಹಾಗೂ ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಸಭೆ, ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ನಿವಾಸ್ ಸಫೆಟ್ ಅವರು ಮಾತನಾಡಿ, ಸಾರಿಗೆ ನಿಯಮಗಳನ್ನು ಉಲ್ಲಂಘಿಸುವ ಸರಕು ವಾಹನ ಸವಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ವಿಶೇಷ ಅಭಿಯಾನವನ್ನು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಜಗದೀಶ್, ಕಾರ್ಮಿಕಾಧಿಕಾರಿ ನಿರಂಜನ್, ಕಾರ್ಮಿಕ ನಿರೀಕ್ಷಿಕ ರವಿಕುಮಾರ್ ಸೇರಿದಂತೆ ಸಾರಿಗೆ, ಶಿಕ್ಷಣ, ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ