ಕುಂದಗೋಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ-ಯಡಿಯೂರಪ್ಪ

ಹುಬ್ಬಳ್ಳಿ,ಮೇ 5- ಕುಂದಗೋಳ ಉಪ ಚುನಾವಣೆಯಲ್ಲಿ ಬಹಳ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂ.ಆರ್.ಪಾಟೀಲ್ ಅವರ ಸಹಕಾರದಿಂದ ನಮಗೆ ಗೆಲವು ಸುಲಭವಾಗುತ್ತದೆ. ಈ ಕ್ಷೇತ್ರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಹಣಬಲದ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ನಾವು ಜನರ ಆರ್ಶಿವಾದದೊಂದಿಗೆ ಚುನಾವಣೆ ಎದುರಿಸುತ್ತೇವೆ ಎಂದರು.

ರಾಜ್ಯದಲ್ಲಿ ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದೆ. ಗೃಹ ಸಚಿವ ಎಂ.ಬಿ.ಪಾಟೀಲ್ ಬಿಜೆಪಿ ಕಾರ್ಯಕರ್ತರನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಹಲವು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದರ ವಿರುದ್ಧ ನಾಳೆ ಹೋರಾಟ ಮಾಡುತ್ತಿದ್ದೇವೆ. ಕುಂದಗೋಳ- ಚಿಂಚೋಳಿ ಜನ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗುಡುಗಿದರು.

ನಾನು ಹಗಲುಗನಸು ಕಾಣುತ್ತಿದ್ದೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಾನು ಕನಸೇ ಕಂಡಿಲ್ಲ ಹಗಲುಗನಸು ಎಲ್ಲಿಯ ಮಾತು..? ಮೇ 23ಕ್ಕೆ ಫಲಿತಾಂಶ ಬರುತ್ತದೆ. ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ