ಬೆಂಗಳೂರು, ಮೇ 6-ಹಂಪಿ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದಾಗಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ರಾಜ್ಯಸರ್ಕಾರ ಮನವಿ ಮಾಡಿದ್ದು, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸಕಾರಾತ್ಮಕ ಸ್ಪಂದಿಸಿದೆ.
ಈ ಬಗ್ಗೆ ಟ್ವೀಟರ್‍ನಲ್ಲಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು, ರಾಜ್ಯದ ಮುಖ್ಯಕಾರ್ಯದರ್ಶಿ ವಿಜಯ್‍ಭಾಸ್ಕರ್ ಹಾಗೂ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು.
ಸುಮಾರು 500 ವಿದ್ಯಾರ್ಥಿಗಳು ಹಂಪಿ ಎಕ್ಸ್‍ಪ್ರೆಸ್ ರೈಲು 6 ಗಂಟೆ ತಡವಾಗಿ ಬಂದಿದ್ದರಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂಬ ವಿಷಯ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಅವಕಾಶ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ರಾಜ್ಯಸರ್ಕಾರದಿಂದ ಮನವಿ ಮಾಡಲು ಮುಖ್ಯ ಕಾರ್ಯದರ್ಶಿ ಮತ್ತು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಯಿತು.
ರಾಜ್ಯಸರ್ಕಾರ ಮನವಿ ಸ್ಪಂದಿಸಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಆದಷ್ಟು ಶೀಘ್ರ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.