ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಅಭಯ್ ಶ್ರೀನಿವಾಸ್ ಓಕಾ

ಬೆಂಗಳೂರು, ಮೇ 10-ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬಾಂಬೆ ಹೈಕೋರ್ಟ್‍ನಲ್ಲಿ ನ್ಯಾಯಮೂರ್ತಿಯಾಗಿ ಸುದೀರ್ಘವಾಗಿ ಸೇವೆ ಸಲ್ಲಿಸಿದ್ದ ಎ.ಎಸ್.ಓಕಾ ಅವರನ್ನು ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಇತ್ತೀಚೆಗೆ ನೇಮಿಸಲಾಗಿತ್ತು.

ಇಂದು ರಾಜ್ಯಪಾಲ ವಿ.ಆರ್.ವಾಲಾ ಅವರು ಮುಖ್ಯನ್ಯಾಯಮೂರ್ತಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.ಪ್ರಮಾಣ ವಚನ ಸ್ವೀಕರಿಸಿದ ಓಕಾ ಅವರು, ನಿಷ್ಪಕ್ಷಪಾತ ಮತ್ತು ನ್ಯಾಯ ನಿಷ್ಠುರವಾಗಿ ನಡೆದುಕೊಳ್ಳುವುದಾಗಿ ಹಾಗೂ ಸಂವಿಧಾನವನ್ನು ಎತ್ತಿ ಹಿಡಿಯುವುದಾಗಿ ಹೇಳಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವೇದಿಕೆಯಲ್ಲಿದ್ದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್,ಹೈಕೋರ್ಟ್‍ನ ಹಂಗಾಮಿ ನ್ಯಾಯಮೂರ್ತಿಯಾಗಿದ್ದ ಎಲ್.ನಾರಾಯಣಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್‍ಭಾಸ್ಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು, ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಿ.ಎಸ್.ವಘೇಲ, ಮೇಯರ್ ಗಂಗಾಂಬಿಕೆ, ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಮತ್ತಿತರರು ಭಾಗವಹಿಸಿದ್ದರು.

ಎ.ಎಸ್.ಓಕಾ ಅವರಿಗೆ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಯವರು ಹೂಗುಚ್ಛ ನೀಡಿ ಅಭಿನಂದಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ