ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅನಗತ್ಯ-ದಿನೇಶ್ ಗುಂಡುರಾವ್

ಹುಬ್ಬಳ್ಳಿ, ಮೇ 10- ಮುಖ್ಯಮಂತ್ರಿ ಬದಲಾವಣೆ ವಿಷಯ ಈಗ ಅಪ್ರಸ್ತುತ. ಚರ್ಚೆ ಅನಗತ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಮತ್ತೆ ಸಿಎಂ ಆಗಬೇಕು ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆ ಸದ್ಯ ಅಪ್ರಸ್ತುತವಾಗಿದೆ. ಈ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದರು.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಸಚಿವರಾದ ಎಂ.ಬಿ.ಪಾಟೀಲ್, ಪಿ.ಟಿ ಪರಮೇಶ್ವರ್ ನಾಯಕ್ ಮುಂತಾದವರು ಹೇಳಿಕೆ ನೀಡಿದ್ದರು. ಈ ಹೇಳಿಕೆಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದವು. ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತದೆಯೇ ಎಂಬ ಅನುಮಾನ ಕಾಡತೊಡಗಿತ್ತು. ಸ್ವತಃ ಸಿದ್ದರಾಮಯ್ಯನವರೇ ಈ ಬಗ್ಗೆ ಸ್ಪಷ್ಟನೆ ನೀಡಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಅಭಿಮಾನಗಳು ತಮ್ಮ ಅಭಿಮಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದರು.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಹೇಳಿಕೆ ಪ್ರತಿಪಕ್ಷಗಳಿಗೂ ಕೂಡ ಪ್ರಬಲ ಅಸ್ತ್ರವಾಗಿತ್ತು. ಆರ್.ಅಶೋಕ್, ಜಗದೀಶ್‍ಶೆಟ್ಟರ್, ಈಶ್ವರಪ್ಪ ಸೇರಿದಂತೆ ಅನೇಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ದಿನೇಶ್ ಗುಂಡೂರಾವ್ ಅವರು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ವಿಷಯ ಚರ್ಚಿಸುವುದು ಅಪ್ರಸ್ತುತ ಎಂದು ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ