ಬರ ಪರಿಸ್ಥಿತಿ ನಿರ್ವಹಣೆ ಸಂಬಂಧ-ಮೇ.15ರಂದು ಮುಖ್ಯಮಂತ್ರಿಯವರಿಂದ ವಿಡಿಯೋ ಸಂವಾದ

ಬೆಂಗಳೂರು, ಮೇ 10- ರಾಜ್ಯದಲ್ಲಿ ಕೈಗೊಂಡಿರುವ ಬರ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಡಿಸಿ, ಸಿಇಒಗಳೊಂದಿಗೆ ಮೇ 15ರಂದು ವಿಡಿಯೋ ಸಂವಾದ ನಡೆಸಲಿದ್ದಾರೆ.

ಅಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ನಡೆಸಲಿದ್ದು, ಪ್ರತಿ ಜಿಲ್ಲೆಯಲ್ಲಿ ಕೈಗೊಂಡಿರುವ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.ಅಲ್ಲದೆ, ಆಯಾ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಸ್ಪಷ್ಟ ನಿರ್ದೇಶನವನ್ನು ನೀಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ನಡೆಸುವ ವಿಡಿಯೋ ಸಂವಾದದ ಸಂದರ್ಭದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು, ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವು, ಜನರು ಗುಳೆ ಹೋಗದಂತೆ ಉದ್ಯೋಗ ಸೃಷ್ಟಿ, ನೆರೆ-ಬರದಂತಹ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದ್ದು, ವಾರದೊಳಗೆ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಯ ಬರಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆಗಳನ್ನು ನಡೆಸಲು ಸೂಚನೆ ನೀಡಲಾಗಿದೆ.

ಮುಂಗಾರಿಗೂ ಮುನ್ನ ಕೆಲವೆಡೆ ಬೇಸಿಗೆ ಮಳೆಯಿಂದ ಉಂಟಾಗಿರುವ ಬೆಳೆ, ವಿದ್ಯುತ್ ಕಂಬ ಸೇರಿದಂತೆ ಉಂಟಾಗಿರುವ ಆಸ್ತಿ-ಪಾಸ್ತಿ ಹಾನಿ ಬಗ್ಗೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮದ ಬಗ್ಗೆಯೂ ಮಾಹಿತಿ ಪಡೆದು ಸೂಕ್ತ ಸೂಚನೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ