ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪುನರಾವಲೋಕಿಸಿ ಹೊಸ ನಿಯಮ ಜಾರಿ

Varta Mitra News

ಬೆಂಗಳೂರು, ಮೇ 10-ಡಿ ಗ್ರೂಪ್‍ನಿಂದ ಪ್ರಥಮ ದರ್ಜೆ ಸಹಾಯಕರ ವರೆಗಿನ ಹುದ್ದೆಗಳಿಗೆ ಸಂಬಂಧಿಸಿದಂತೆ ಕನಿಷ್ಠ 3 ವರ್ಷಗಳಿಗೊಮ್ಮೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪುನರಾವಲೋಕಿಸಿ ಹೊಸ ನಿಯಮಗಳನ್ನು ರೂಪಿಸಿ ಜಾರಿಗೆ ತರಲು ಸರ್ಕಾರದ ವಿವಿಧ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಸಾಮಾನ್ಯ ವೃಂದಗಳಾದ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಕಿರಿಯ ಸಹಾಯಕ, ಬೆರಳಚ್ಚುಗಾರ ಮತ್ತು ಡಿಗ್ರೂಪ್ ವೃಂದಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ನಿಯಮ ಅಳವಡಿಸಲು ಸೂಚಿಸಲಾಗಿದೆ.

ಹಾಗೆಯೇ ಆಯಾ ಇಲಾಖೆಗಳಲ್ಲಿನ ಇತರೆ ವೃಂದಗಳಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ತುಂಡು ತುಂಡಾಗಿ ಸಲ್ಲಿಸಬಾರದೆಂದು ವಿವಿಧ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.

ಸರ್ಕಾರದ ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವ ಸಂಬಂಧ ಸ್ಪಷ್ಟವಾದ ಸೂಚನೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನೀಡಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಲಾಗಿದೆ.

ಹೊಸದಾಗಿ ಇಲಾಖೆ ಅಸ್ತಿತ್ವಕ್ಕೆ ಬಂದ ಒಂದು ವರ್ಷದೊಳಗಾಗಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರೂಪಿಸಲು ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಯಾವುದೇ ಕಾರಣಕ್ಕೂ ಆಯಾ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ತುಂಡು ತುಂಡು ತಿದ್ದುಪಡಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬಾರದು ಎಂದು ಸೂಚಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ