ಬೆಂಗಳೂರು, ಮೇ 11- ನಮ್ಮಲ್ಲಿ ಯಾವುದೇ ಒಳಜಗಳವಿಲ್ಲ. ಒಮ್ಮತದ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ವಾರ್ಡ್ನ್ನು ಉಳಿಸಿಕೊಳ್ಳಲಾಗುವುದು ಎಂದು ಜೆಡಿಎಸ್ ನಗರಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ.
ಉಪಮೇಯರ್ ರಮೀಳಾ ಉಮಾಶಂಕರ್ ಅವರ ನಿಧನದಿಂದ ತೆರವಾಗಿರುವ ಕಾವೇರಿಪುರ ವಾರ್ಡ್ಗೆ ಇದೇ 29ರಂದು ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತಿದೆ ಎಂದರು.
ಒಮ್ಮತದ ಅಭ್ಯರ್ಥಿ ಆಯ್ಕೆ ಕುರಿತಂತೆ ಇಂದು ಕಾಂಗ್ರೆಸ್-ಜೆಡಿಎಸ್ ಮುಖಂಡರೊಂದಿಗೆ ಚರ್ಚಿಸಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅವರು ಹೇಳಿದರು.
ಕಾವೇರಿಪುರ ಜೆಡಿಎಸ್ ಭದ್ರಕೋಟೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಬೆಂಬಲ ದೊರೆಯುತ್ತಿರುವುದರಿಂದ ಜೆಡಿಎಸ್ ವಶದಲ್ಲಿದ್ದ ಕಾವೇರಿಪುರವನ್ನು ಮತ್ತೆ ಪಕ್ಷದ ತೆಕ್ಕೆಗೆ ತೆಗೆದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ರಮೀಳಾ ಅವರ ಪತಿ ಉಮಾಶಂಕರ್ ಅವರು ತಮ್ಮ ಸಹೋದರಿ ಜಯಲಕ್ಷ್ಮಮ್ಮ ಅವರಿಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ನಮ್ಮ ಪಕ್ಷದ ವರಿಷ್ಠರು ಈಗಾಗಲೇ ನನ್ನ ಕೈಗೆ ಬಿ ಫಾರಂ ನೀಡಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರೊಂದಿಗೆ ಚರ್ಚಿಸಿ ಸಂಜೆ ವೇಳೆಗೆ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತೇವೆ ಎಂದು ಪ್ರಕಾಶ್ ವಿವರಿಸಿದರು.
ಸಗಾಯಿಪುರಂ ವಾರ್ಡ್ನಿಂದ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆ ಅಥವಾ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.