ತಾಯಿಯ ಪ್ರೀತಿಯನ್ನು ಎಂದಿಗೂ ಮರಳಿಸಲು ಸಾಧ್ಯವಿಲ್ಲ. ತಾಯಿಯ ಪ್ರೀತಿ, ತ್ಯಾಗಕ್ಕೆ ನಾವು ಏನೇ ಮಾಡಿದರೂ ಅದು ಕಡಿಮೆ ಆಗುತ್ತದೆ. ನಮ್ಮನ್ನು ಈ ಜಗತ್ತಿಗೆ ತರುವ ತಾಯಿಗೆ ಗೌರವ ಹಾಗೂ ಪ್ರೀತಿಯನ್ನು ತೋರಿಸಲು ನಮಗೆ ಯಾವುದೇ ವಿಶೇಷ ದಿನ ಅಗತ್ಯವಿಲ್ಲ. ಆದರೆ ತಾಯಂದಿರ ದಿನ ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಒಂದು ಅವಕಾಶ ನೀಡುತ್ತದೆ. ಹಾಗಾಗಿ ಪ್ರತಿ ವರ್ಷ ಮೇ ತಿಂಗಳ ಎರಡನೇ ಭಾನುವಾರವನ್ನು ವಿಶ್ವ ತಾಯಂದಿರ ದಿನ ಎಂದು ಆಚರಿಸಲಾಗುತ್ತದೆ.
ತಾಯಂದಿರ ದಿನ ಶುರುವಾಗಿದ್ದು ಹೇಗೆ?
ತಾಯಂದಿರ ದಿನ 1908ರಲ್ಲಿ ಅಮೆರಿಕದಲ್ಲಿ ಶುರುವಾಗಿತ್ತು. ಅಮೆರಿಕದ ಶಾಂತಿ ಕಾರ್ಯಕರ್ತೆ ಆಗಿದ್ದ ಅನಾ ಜಾರ್ವಿಸ್ ತನ್ನ ತಾಯಿಯನ್ನು ತುಂಬಾ ಪ್ರೀತಿಸುತ್ತಿದ್ದರು. ಅನಾ ಜಾರ್ವಿಸ್ ಮದುವೆ ಆಗಿರಲಿಲ್ಲ. 1905ರಲ್ಲಿ ಅನಾ ತಾಯಿ ಮರಣ ಹೊಂದಿದ್ದರು. ತನ್ನ ತಾಯಿಯ ಮೇಲಿದ್ದ ಪ್ರೀತಿಯನ್ನು ವ್ಯಕ್ತಪಡಿಸಲು ಅನಾ ಈ ದಿನ ಆಯ್ಕೆ ಮಾಡಿಕೊಂಡಿದ್ದರು. ಬಳಿಕ ಈ ದಿನವನ್ನು ತಾಯಂದಿರ ದಿನವಾಗಿ ಆಚರಿಸಲು ಶುರು ಮಾಡಿದ್ದರು.
2ನೇ ಭಾನುವಾರ ತಾಯಂದಿರ ದಿನ ಏಕೆ ಆಚರಿಸುತ್ತಾರೆ?
ಮೇ 9, 1914ರಂದು ಅಮೆರಿಕದ ರಾಷ್ಟ್ರಪತಿ ಆಗಿದ್ದ ವುಡ್ರೋ ವಿಲ್ಸನ್ ಪ್ರತಿ ವರ್ಷ ಮೇ 2ನೇ ಭಾನುವಾರದಂದು ತಾಯಂದಿರ ದಿನ ಎಂದು ಆಚರಿಸಲಾಗುತ್ತದೆ ಎಂದು ಕಾನೂನನ್ನು ಜಾರಿಗೊಳಿಸಿದರು. ಈ ಕಾನೂನು ಜಾರಿ ಮಾಡಿದ ನಂತರ ಅಮೆರಿಕ, ಭಾರತ ಹಾಗೂ ಹಲವು ದೇಶಗಳಲ್ಲಿ ಮೇ ತಿಂಗಳ 2ನೇ ಭಾನುವಾರದಂದು ತಾಯಂದಿರ ದಿನವನ್ನಾಗಿ ಆಚರಿಸಲಾಗುತ್ತದೆ.
ತಾಯಂದಿರ ದಿನ ಏಕೆ ಆಚರಿಸುತ್ತಾರೆ?
ತಾಯಿಗಾಗಿ ಪ್ರೀತಿ ಹಾಗೂ ಉಡುಗೊರೆ ನೀಡಲು ಯಾವುದೇ ವಿಶೇಷ ದಿನದ ಅಗತ್ಯ ಇಲ್ಲ. ಆದರೂ ಸಹ ತಾಯಂದಿರ ದಿನದಂದು ತಾಯಿಗೆ ಮತ್ತಷ್ಟು ಗೌರವ ನೀಡಲಾಗುತ್ತದೆ. ಈ ದಿನದಂದು ತಾಯಿಗೆ ಸಿಹಿ ಜೊತೆ ಉಡುಗೊರೆ ನೀಡಲಾಗುತ್ತದೆ.
ಲಂಡನ್ನಲ್ಲಿ ತಾಯಂದಿರ ದಿನವನ್ನು ಮಾರ್ಚ್ ತಿಂಗಳ ನಾಲ್ಕನೇ ಭಾನುವಾರದಂದು ಆಚರಿಸಲಾಗುತ್ತದೆ. ಗ್ರೀಸ್ ದೇಶದಲ್ಲಿ ಫೆಬ್ರವರಿ 2ರಂದು ಆಚರಿಸಲಾಗುತ್ತದೆ. ಭಾರತ ಸೇರಿ ಹಲವಾರು ದೇಶಗಳಲ್ಲಿ ಪ್ರತಿ ವರ್ಷ ಮೇ ತಿಂಗಳ 2ನೇ ಭಾನುವಾರದಂದು ತಾಯಂದಿರ ದಿನ ಆಚರಿಸಲಾಗುತ್ತದೆ. ಈ ವರ್ಷ ಮೇ 12ರಂದು ತಾಯಂದಿರ ದಿನ ಆಚರಿಸಲಾಗುತ್ತದೆ.