ಸರಕು ಸಾಗಾಣಿಕೆ ವಾಹನಗಳಲ್ಲಿ ಜನರನ್ನು ಕೊಂಡಯ್ಯುವಾಗ ಅಪಘಾತ ಸಂಭವಿಸಿದರೆ ಮಾಲೀಕರೇ ಹೊಣೆ-ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 14- ಸರಕು ಸಾಗಾಣಿಕೆ ವಾಹನಗಳಲ್ಲಿ ಜನರನ್ನು ಕೊಂಡೊಯ್ದು ಅಪಘಾತ ಸಂಭವಿಸಿದಲ್ಲಿ ಅಂತಹ ವಾಹನಗಳ ಮಾಲೀಕರನ್ನು ಹೊಣೆಗಾರರನ್ನಾಗಿ ಮಾಡಿ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಅವರು ಎಚ್ಚರಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ಮಾಲೀಕರು, ಕಾರ್ಮಿಕರು, ಉದ್ಯೋಗಿಗಳು, ಸರಕು ವಾಹನಗಳ ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಆಯೋಜಿಸಲಾದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕು ಸಾಗಾಣಿಕೆ ವಾಹನಗಳಲ್ಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ಕೊಂಡೊಯ್ಯುವ ಸಂದರ್ಭದಲ್ಲಿ ಅಪಘಾತವಾಗಿ ಯಾರಾದರೂ ಮರಣಹೊಂದಿದರೆ ಅವರಿಗೆ ವಿಮಾ ಕಂಪನಿಯಿಂದ ಯಾವುದೇ ರೀತಿಯ ಪರಿಹಾರವಾಗಲಿ, ಸೌಲಭ್ಯಗಳಾಗಲಿ ದೊರಕುವುದಿಲ್ಲ ಎಂದು ಹೇಳಿದರು.

ಉದ್ದಿಮೆಗಳ ಮಾಲೀಕರು ತಮ್ಮಲ್ಲಿ ಕೆಲಸಕ್ಕೆ ಬರುವ ಕಾರ್ಮಿಕರು ಸರಕು ಸಾಗಾಣಿಕೆ ವಾಹನಗಳಲ್ಲಿ ಕಾನೂನು ಬಾಹಿರವಾಗಿ ಪ್ರಯಾಣಿಸಬಾರದೆಂದು ಅರಿವು ಮೂಡಿಸಬೇಕು ಎಂದು ಹೇಳಿದ ಅವರು ಮೊದಲ ಹಂತದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು. ಜಾಗೃತಿ ಕಾರ್ಯಕ್ರಮಗಳ ನಂತರವೂ ಮುಂದಿನ ದಿನಗಳಲ್ಲಿ ಸರಕು ಸಾಗಣಿ ವಾಹನಗಳಲ್ಲಿ ಸಾರ್ವಜನಿಕರು ಕೊಂಡೊಯ್ಯುವುದು ಕಂಡು ಬಂದಲ್ಲಿ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂಬಂಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಮಾಲೀಕರ ಸಭೆಯನ್ನು ಶೀಘ್ರದಲ್ಲೇ ಕರೆದು, ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಸಹಾಯಕ ಸಾರಿಗೆ ಅಧಿಕಾರಿ ಮಂಜುನಾಥ್ ಮಾತನಾಡಿ, ಮೋಟಾರು ವಾಹನಗಳ ಅಧಿನಿಯಮ 1988ರ ಕಲಂ 53 ರಿಂದ 55 ರಡಿ ವಾಹನ ನೋಂದಣಿ ಪ್ರಮಾಣ ಪತ್ರ ರದ್ದು ಹಾಗೂ ಮೋಟಾರು ವಾಹನ ಕಾಯ್ದೆ 1988ರ ಕಲಂ 86 ರಡಿ ರಹದಾರಿ ರದ್ದು ಪಡಿಸಲು ಅವಕಾಶವಿದೆ ಎಂದು ತಿಳಿಸಿದರು.

ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಬಳಿಯಲ್ಲಿ ಆಯೋಜಿಸಲಾದ ರಸ್ತೆ ಸುರಕ್ಷತಾ ಜಾಥಾದಲ್ಲಿ ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ದೊಡ್ಡಬಳ್ಳಾಪುರ ಉಪ ಪೊಲೀಸ್ ವರಿಷ್ಠಾಧಿಕಾರಿ ಮೋಹನ್ ಮತ್ತಿತರರು ಭಾಗವಹಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ