ಬೆಂಗಳೂರು, ಮೇ 17- ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕೆ ಹೇಳಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ತಿಳಿಸಿದ್ದಾರೆ.
ರೇವಣ್ಣ ಅವರು ಮುಖ್ಯಮಂತ್ರಿಯಾಗಬೇಕೆಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಬೇರೊಬ್ಬರು ಮುಖ್ಯಮಂತ್ರಿಯಾಗುವ ವಾತಾವರಣವಿಲ್ಲ. ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಹೇಳಿದರು.
ಮುಂದಿನ ಬೆಳವಣಿಗೆಗಳಲ್ಲಿ ಅಂತಹ ಸಂದರ್ಭವೇನಾದರೂ ಒದಗಿ ಬಂದರೆ ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾಗಾಂಧಿ ಅವರು ಪ್ರಾದೇಶಿಕ ಪಕ್ಷಗಳ ಸಭೆ ಕರೆದಿರುವುದು ಜಾತ್ಯತೀತ ಶಕ್ತಿಗಳನ್ನು ಒಂದುಗೂಡಿಸುವ ಉದ್ದೇಶದಿಂದ. ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಅವರು ಸಭೆ ಕರೆದಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಿದ್ದಾರೆ. ಜಾತ್ಯತೀತ ಶಕ್ತಿಗಳು ಒಗ್ಗೂಡುವ ಸಂದರ್ಭ ಈಗ ಎದುರಾಗಿದ್ದು, ಈ ಸಂದರ್ಭದಲ್ಲಿ ಗೌಡರ ಸಲಹೆ ಪಡೆಯಲು ಸೋನಿಯಾಗಾಂಧಿ ಆಹ್ವಾನ ನೀಡಿರಬಹುದು ಎಂದರು.
ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸಂಘಟನೆಯತ್ತ ಗಮನ ಹರಿಸಲಾಗಿದ್ದು, ಆ ನಿಟ್ಟಿನಲ್ಲಿ ಗೌಡರು ರಾಜ್ಯದಲ್ಲಿ ಪಕ್ಷದ ಮುಖಂಡರ ಸಭೆಯನ್ನು ಕರೆದು ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಿದರು.