ನವದೆಹಲಿ: ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಅವಮಾನಿಸಿದ ಪ್ರಗ್ಯಾ ಸಿಂಗ್ ರನ್ನು ಯಾವುದೇ ಕಾರಣಕ್ಕೂ ಕ್ಷಮಿಸಲ್ಲ ಎಂದು ಹೇಳಿದ್ದಾರೆ.
ಮಧ್ಯ ಪ್ರದೇಶದ ಖಾರ್ಗೋನ್ ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಗ್ಯಾ ಸಿಂಗ್ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೇಳಿರಬುಹುದು. ಆದರೆ ಬಾಪು ಅವರನ್ನು ಅವಮಾನ ಮಾಡಿದ ಅವರನ್ನು ನನ್ನಿಂದ ಕ್ಷಮಿಸಲು ಸಾಧ್ಯವಿಲ್ಲ ಎಂದರು.
ಮಹಾತ್ಮ ಗಾಂಧೀಜಿ ಈ ದೇಶದ ಹೆಮ್ಮೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಬಾಪೂಜಿಯನ್ನು ಅವಮಾನಿಸುವ ಇಂತಹ ಹೇಳಿಕೆ ನೀಡಿದ್ದು ಅಕ್ಷಮ್ಯ ಅಪರಾಧ. ಈ ಕೃತ್ಯವೆಸಗಿದ ಸಾಧ್ವಿ ಪ್ರಗ್ಯಾ ಸಿಂಗ್ರನ್ನು ಯಾವುದೇ ಕಾರಣಕ್ಕೂ ನಾನು ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದರು.
ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪ್ರಗ್ಯಾ ಸಿಂಗ್ ಠಾಕೂರ್, ನಾಥೂರಾಮ್ ಗೋಡ್ಸೆ ಒಬ್ಬ ದೇಶಭಕ್ತ. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಉಳಿಯುತ್ತಾರೆ ಎಂದು ಹೇಳಿದ್ದರು. ಅವರ ಹೇಳಿಕೆಯನ್ನು ಬಿಜೆಪಿ ಖಂಡಿಸಿ, ಕ್ಷಮೆಯಾಚಿಸುವಂತೆ ಸೂಚಿಸಿದ ಬಳಿಕ ಕ್ಷಮೆಯಾಚಿಸಿದ್ದರು.
“Will Never Forgive Pragya Thakur For Insulting Bapu”: PM On Godse Remark