ಬೆಂಗಳೂರು, ಮೇ 22-ಕಾಂಗ್ರೆಸ್ ಶಾಸಕರು ಪದೇ ಪದೇ ಬಹಿರಂಗ ಹೇಳಿಕೆಗಳನ್ನು ನೀಡಿ ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲ ಉಂಟು ಮಾಡುತ್ತಿರುವುದಕ್ಕೆ ಬ್ರೇಕ್ ಹಾಕುವುದಾಗಿ ಕಾಂಗ್ರೆಸ್ ಹೈಕಮಾಂಡ್ ಭರವಸೆ ನೀಡಿದೆ.
ಬೆಂಗಳೂರಿನಲ್ಲಿ ನಿನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಅವರು ನಿನ್ನೆ ಕಾವೇರಿಯಲ್ಲಿ ಒಂದು ಸುತ್ತಿನ ಸಭೆ ನಡೆಸಿದ್ದು,ನಂತರ ವೇಣುಗೋಪಾಲ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಸಮ್ಮಿಶ್ರ ಸರ್ಕಾರ ರಚನೆಯಾಗುವ ವೇಳೆಯಲ್ಲೇ ಐದು ವರ್ಷಗಳ ಅವಧಿಗೆ ಕಾಂಗ್ರೆಸ್ ಜೆಡಿಎಸ್ಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದೆ. ಅದಕ್ಕೆ ಕಾಂಗ್ರೆಸ್ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ನಮ್ಮಿಂದ ಸರ್ಕಾರಕ್ಕೆ ತೊಂದರೆಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಕುಮಾರಸ್ವಾಮಿಯವರಿಗೆ ಭರವಸೆ ನೀಡಿದ್ದಾರೆ.
ಗೊಂದಲಗಳು ಉಂಟಾಗುವಂತೆ ಎರಡೂ ಪಕ್ಷಗಳಲ್ಲಿ ಹೇಳಿಕೆಗಳು ಹೊರಬರುತ್ತಿವೆ. ಇದಕ್ಕೆ ಶೀಘ್ರವೇ ಕಡಿವಾಣ ಹಾಕಬೇಕು ಎಂದು ಚರ್ಚೆಯಾಗಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಲೋಕಸಭೆ ಚುನಾವಣೆ ಫಲಿತಾಂಶಗಳ ಬಗ್ಗೆ ಸಮಾಲೋಚನೆ ನಡೆದಿದೆ. ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ನ ನಡವಳಿಕೆಗಳು, ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ನಿಂದ ಕೇಳಿಬರುತ್ತಿರುವ ಆಕ್ಷೇಪಗಳ ಬಗ್ಗೆಯೂ ಮಾತುಕತೆ ನಡೆದಿದೆ. ಕಾಂಗ್ರೆಸ್ ಶಾಸಕರ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಲಾಗಿದೆ.
ಜೆಡಿಎಸ್ ನಾಯಕರು ಕಾಂಗ್ರೆಸ್ ಶಾಸಕರ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವುದರಿಂದ ಈ ರೀತಿಯ ಹೇಳಿಕೆಗಳು ಹೊರಬರುತ್ತಿವೆ. ಮೊದಲು ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ತಾರತಮ್ಯಗಳು ನಿಲ್ಲಬೇಕು ಎಂದು ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.