ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

ಬೆಂಗಳೂರು, ಮೇ 22- ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ನಾಯಕರು ಹಾಗೂ ಅಭ್ಯರ್ಥಿಗಳ ಎದೆ ಬಡಿತ ಹೆಚ್ಚಾಗಿದ್ದರೆ, ಕಾರ್ಯಕರ್ತರು, ಅಭಿಮಾನಿಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಮುಂದುವರಿದಿದೆ. ಚುನಾವಣಾ ಆಯೋಗ ನಾಳೆ ಮತ ಎಣಿಕೆಗೆ ಎಲ್ಲ ಕ್ಷೇತ್ರಗಳಲ್ಲೂ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಗಳಿವೆ.

ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಆಯೋಗ ಮತ ಎಣಿಕೆ ಕೇಂದ್ರ ಹಾಗೂ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಅಲ್ಲದೆ, ಮತ ಎಣಿಕೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ.

ರಾಜ್ಯದ ಎಲ್ಲ ಮತ ಎಣಿಕೆ ಕೇಂದ್ರಗಳಲ್ಲಿ ನಾಳೆ ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಲಿದ್ದು, ಮೊದಲಿಗೆ ಅಂಚೆ ಮತಪತ್ರಗಳ ಎಣಿಕೆ ನಡೆಸಲಾಗುತ್ತದೆ. ಕನಿಷ್ಠ 18 ರಿಂದ 33 ಸುತ್ತುಗಳ ಮತ ಎಣಿಕೆ ನಡೆಯುತ್ತದೆ.

ರಾಜ್ಯದಲ್ಲಿ ಏಪ್ರಿಲ್ 18 ಹಾಗೂ 23ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್ ಹೆಗಡೆ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ, ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದರಾದ ಕೆ.ಎಚ್.ಮುನಿಯಪ್ಪ, ಶೋಭಾ ಕರಂದ್ಲಾಜೆ ಸೇರಿದಂತೆ 28 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 461 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಮಂಡ್ಯ ಹೊರತುಪಡಿಸಿ ಬಿಜೆಪಿ 27 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್ 7 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿವೆ.

ರಾಜ್ಯದ 28 ಕ್ಷೇತ್ರಗಳ ಪೈಕಿ ಮಂಡ್ಯ, ತುಮಕೂರು, ಹಾಸನ, ಶಿವಮೊಗ್ಗ, ಕಲಬುರಗಿ, ಮೈಸೂರು, ಕೋಲಾರ ಕ್ಷೇತ್ರಗಳ ಫಲಿತಾಂಶ ರಾಜಕೀಯವಾಗಿ ಭಾರೀ ಕುತೂಹಲ ಕೆರಳಿಸಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಾಹಿತಿ ಪ್ರಕಾರ, ರಾಜ್ಯದಲ್ಲಿ 3,50,31,495 ಮತದಾರರು ಮತ ಚಲಾಯಿಸಿದ್ದು, ಶೇ.68.62ರಷ್ಟು ಮತದಾನವಾಗಿದೆ. 1,79,56,603 ಪುರುಷರು, 1,70,74,336 ಮಹಿಳೆಯರು ಹಾಗೂ 566 ಇತರೆ ಮತದಾರರು ಮತದಾನ ಮಾಡಿದ್ದರು.

ಮೊದಲಿಗೆ ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಗುತ್ತದೆ. ನಂತರ ವಿದ್ಯುನ್ಮಾನ ಮತಯಂತ್ರಗಳ ಎಣಿಕೆಯನ್ನು ಆರಂಭಿಸಲಾಗುತ್ತದೆ.

ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ 14 ಟೇಬಲ್‍ಗಳಲ್ಲಿ ಮತ ಎಣಿಕೆ ನಡೆಸಲಾಗುತ್ತದೆ. ಮತ ಎಣಿಕೆಗಾಗಿ 28 ಚುನಾವಣಾಧಿಕಾರಿಗಳು, 258 ಸಹಾಯಕ ಚುನಾವಣಾಧಿಕಾರಿಗಳು, 180 ಹೆಚ್ಚುವರಿ ಸಹಾಯಕ ಚುನಾವಣಾಧಿಕಾರಿಗಳು, 80 ಹೆಚ್ಚುವರಿ ವೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ.

ರಾಜ್ಯದಲ್ಲಿ 58,186 ಮತಗಟ್ಟೆಗಳಿದ್ದು, ಒಟ್ಟು 3224 ಟೇಬಲ್‍ಗಳಲ್ಲಿ ಮತ ಎಣಿಕೆ ನಡೆಯಲಿದೆ. ಎಲ್ಲ 28 ಕ್ಷೇತ್ರಗಳಿಂದ 4215 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. 3682 ಮಂದಿ ಮತ ಎಣಿಕೆ ಮೇಲ್ವಿಚಾರಣೆ ಮಾಡಲಿದ್ದು, 3707 ಮತ ಎಣಿಕೆ ಸಹಾಯಕರು, 3738 ಮೈಕ್ರೋ ವೀಕ್ಷಕರು ಮತ ಎಣಿಕೆ ಸಂದರ್ಭದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಮತ ಎಣಿಕೆ ಕೇಂದ್ರಗಳಿಗೆ ರಾಜ್ಯ ಮತ್ತು ಕೇಂದ್ರ ಸಶಸ್ತ್ರ ಪಡೆಗಳು ಸೇರಿದಂತೆ ಸೂಕ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಒದಗಿಸಲಾಗುತ್ತದೆ. ಸಿಸಿಟಿವಿ ಅಳವಡಿಸಲಾಗುತ್ತದೆ.

300ಕ್ಕೂ ಹೆಚ್ಚು ಮತಗಟ್ಟೆಗಳಿರುವ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚುವರಿ ಎಣಿಕೆ ಟೇಬಲ್‍ಗಳನ್ನು ವ್ಯವಸ್ಥೆ ಮಾಡಲಾಗುತ್ತದೆ.

ಮತ ಎಣಿಕೆ ಕೇಂದ್ರಗಳಲ್ಲಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿ ಹಾಗೂ ಅವರ ಏಜೆಂಟ್‍ಗಳಿಗೂ ಮೊಬೈಲ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಅಂಚೆ ಮತಪತ್ರಗಳ ಎಣಿಕೆ ಕಾರ್ಯ ನಡೆಸಲಾಗುತ್ತದೆ. ಇವಿಎಂ ಮತ ಎಣಿಕೆ ಕಾರ್ಯ ಬೆಳಗ್ಗೆ 8.30ರ ನಂತರ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಿಗದಿಪಡಿಸಿರುವ ಮತ ಎಣಿಕೆ ಕೊಠಡಿಗಳಲ್ಲಿ ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಡೆಯಲಿದೆ.

ಮತ ಎಣಿಕೆ ಮೇಲ್ವಿಚಾರಕರು, ಸಹಾಯಕರು ಹಾಗೂ ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನೇಮಿಸಲಾಗಿದ್ದು, ಶೇ.20ರಷ್ಟು ಹೆಚ್ಚುವರಿ ಸಿಬ್ಬಂದಿಗಳನ್ನು ಕಾಯ್ದಿರಿಸಲಾಗಿದೆ. ಮತ ಎಣಿಕೆ ಸಿಬ್ಬಂದಿಗೆ ಈಗಾಗಲೇ ಅಗತ್ಯ ತರಬೇತಿ ನೀಡಲಾಗಿದೆ.

ಪ್ರತಿ ವಿಧಾನಸಭಾ ಕ್ಷೇತ್ರವಾರು ಲಾಟರಿ ಮೂಲಕ ಐದು ಮತಗಟ್ಟೆಗಳ ವಿವಿ ಪ್ಯಾಟ್‍ಗಳನ್ನು ಆರಿಸಿ ವಿವಿ ಪ್ಯಾಟ್ ಸ್ಲಿಪ್‍ಗಳ ಎಣಿಕೆ ಕಾರ್ಯ ಕೈಗೊಳ್ಳಲಾಗುತ್ತದೆ. ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್‍ನಲ್ಲಿರುವ ಮತಗಳನ್ನು ತಾಳೆ ಹಾಕಿದ ನಂತರವೇ ಫಲಿತಾಂಶ ಪ್ರಕಟಿಸಲಾಗುತ್ತದೆ.

ಚುನಾವಣಾ ಏಜೆಂಟರು ಮತ ಎಣಿಕೆ ಕೇಂದ್ರದಲ್ಲಿ ತಮ್ಮ ಟೇಬಲ್ ಬಿಟ್ಟು ಓಡಾಡಲು ಹಾಗೂ ಗಲಾಟೆ ಮಾಡಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು, ಅಭ್ಯರ್ಥಿಗಳ ಏಜೆಂಟರು, ಮತ ಎಣಿಕೆ ಏಜೆಂಟರು ನಿಶ್ಯಬ್ಧ ಕಾಪಾಡಿಕೊಳ್ಳಬೇಕು, ಶಿಸ್ತುಬದ್ಧವಾಗಿ ವರ್ತಿಸಬೇಕು ಎಂದು ಸೂಚಿಸಲಾಗಿದೆ.

ಮತ ಎಣಿಕೆ ನಂತರವೇ ಏಜೆಂಟರನ್ನು ಹೊರ ಕಳುಹಿಸಲಾಗುವುದು. ಮತ ಎಣಿಕೆಯ ಎಲ್ಲ ಸಿಬ್ಬಂದಿಗೆ ಗುರುತಿನ ಚೀಟಿ ನೀಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ