ಬೆಂಗಳೂರು, ಮೇ 23- ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಭಾರೀ ಹಿನ್ನಡೆ ಅನುಭವಿಸಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತವನ್ನು ಮಾಜಿ ಸಚಿವ ಎಚ್.ವಿಶ್ವನಾಥ್ ವ್ಯಕ್ತಪಡಿಸಿದ್ದಾರೆ.
ತುಮಕೂರು, ಹಾಸನ, ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯ ಗಳಿಸದಿದ್ದರೆ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ವಿಶ್ವನಾಥ್ ಹೇಳಿದ್ದರು ಎನ್ನಲಾಗಿದೆ.
ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಆದರೆ, ಉಳಿದ ಆರೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹಿನ್ನಡೆ ಅನುಭವಿಸಿದ್ದಾರೆ. ಈ ಹಿನ್ನೆಲೆಯಿಂದಾಗಿ ವಿಶ್ವನಾಥ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ವಿಶ್ವನಾಥ್ ಜೆಡಿಎಸ್ ಅಧ್ಯಕ್ಷರಾದ ನಂತರ ನಡೆದ ಮಹತ್ವದ ಚುನಾವಣೆ ಇದಾಗಿದ್ದು, ಸೋಲಿನ ನೈತಿಕ ಹೊಣೆ ಹೊರುವುದಾಗಿ ಅವರು ಹೇಳಿದ್ದಾರೆ ಎನ್ನಲಾಗಿದೆ.