ಪ್ರಧಾನಿ ಮೋದಿ ಅಲೆಯ ಮುಂದೆ ದೋಸ್ತಿ ಪಕ್ಷಗಳು ಧೂಳಿಪಟ

ಬೆಂಗಳೂರು, ಮೇ 23- ಜಿದ್ದಾಜಿದ್ದಿನಿಂದ ಕೂಡಿದ್ದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯ ಮುಂದೆ ದೋಸ್ತಿ ಪಕ್ಷಗಳು ಧೂಳಿ ಪಟವಾಗಿದ್ದು, ಬಿಜೆಪಿ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದೆ.

ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 24 ಕ್ಷೇತ್ರಗಳನ್ನು ಕಬಳಿಸಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಕೇವಲ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲುವ ಸಾಧ್ಯತೆ ಇದೆ. ಚುನಾವಣೆಗೂ ಮುನ್ನವೇ ದೇಶದ ಗಮನ ಸೆಳೆದಿದ್ದ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ಹಾಗೂ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ದವಡೆಗೆ ಸಿಲುಕಿದ್ದಾರೆ.

ತೀವ್ರ ಸ್ಪರ್ಧೆಯೊಡ್ಡುತ್ತಿರುವ ಚಿತ್ರನಟಿ ಹಾಗೂ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತ ಅಂಬರೀಶ್ ಸಮಬಲ ಹೋರಾಟ ನಡೆಸಿ ಗೆಲುವಿನತ್ತ ಸಾಗಿದ್ದಾರೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕಲ್ಪತರು ನಾಡು ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಬಿಜೆಪಿ ಅಭ್ಯರ್ಥಿ ಜಿ.ಎಸ್.

ಬಸವರಾಜು ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟು, ಅಂತಿಮವಾಗಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಸೋಲಿಲ್ಲದ ಸರದಾರನೆಂದೇ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕಲ್ಬುರ್ಗಿಯಲ್ಲಿ ಸೋಲಿನ ರುಚಿ ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಗೆಲುವು ಕಂಡಿದ್ದಾರೆ.

ಸತತ ಏಳು ಬಾರಿ ಗೆದ್ದು ದಾಖಲೆ ಬರೆದಿದ್ದ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪಗೆ ಭಾರೀ ಮುಖಭಂಗವಾಗಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಅಚ್ಚರಿಯ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ.

ಕೋಲಾರದಂತೆ ಪಕ್ಕದ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ದಾಖಲೆಯ ಮತಗಳ ಅಂತರದಿಂದ ಕಾಂಗ್ರೆಸ್‍ನ ಹಿರಿಯ ಮುಖಂಡ ಡಾ.ವೀರಪ್ಪ ಮೊಯ್ಲಿ ಅವರನ್ನು ಪರಾಭವಗೊಳಿಸಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ.

ಬೆಂಗಳೂರಿನಲ್ಲಿ ಮೂರು ಲೋಕಸಭಾ ಕ್ಷೇತ್ರಗಳು ಬಿಜೆಪಿ ಪಾಲಾಗಿವೆ. ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ, ಬೆಂಗಳೂರು ಉತ್ತರದಲ್ಲಿ ಡಿ.ವಿ.ಸದಾನಂದಗೌಡ, ಬೆಂಗಳೂರು ಕೇಂದ್ರದಲ್ಲಿ ಪಿ.ಸಿ.ಮೋಹನ್ ಜಯ ಸಾಧಿಸಿದ್ದಾರೆ.

ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ 2ನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಪರಾಭವಗೊಂಡಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಕಂಡಿರುವುದರಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಾರೀ ಮುಖಭಂಗವಾಗಿದೆ.

ನಿರೀಕ್ಷೆಯಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಮೂರು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.

ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದೆ ಶೋಭ ಕರಂದ್ಲಾಜೆ ಜಯಗಳಿಸಿದ್ದಾರೆ. ದೋಸ್ತಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಸೋಲು ಅನುಭವಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳೀನ್‍ಕುಮಾರ್ ಕಟೀಲ್ ಭಾರೀ ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಸೋಲಾಗಿದೆ.

ತನ್ನ ವಿವಾದಾತ್ಮಕ ಹೇಳಿಕೆಯಿಂದಲೇ ಪಕ್ಷಕ್ಕೆ ಮುಜುಗರ ತರುತ್ತಿದ್ದ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಭಾರೀ ಮತಗಳ ಅಂತರದಿಂದ ಗೆದ್ದಿದ್ದಾರೆ.

ಪ್ರತಿಷ್ಠಿತ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ನಿರೀಕ್ಷೆಗೂ ಮೀರಿದ ಮತಗಳ ಅಂತರದಿಂದ 3ನೇ ಬಾರಿಗೆ ಮೂರನೇ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪ ಅವರಿಗೆ ಹ್ಯಾಟ್ರಿಕ್ ಸೋಲು ಉಂಟಾಗಿದೆ.

ಬೆಣ್ಣೆನಗರಿ ದಾವಣಗೆರೆಯಲ್ಲೂ ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ 4ನೇ ಬಾರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ.ಮಂಜಪ್ಪ ಎದುರಿಸಿದ ಮೊದಲ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.

ಉಳಿದಂತೆ ಹೈದರಾಬಾದ್ ಕರ್ನಾಟಕದ ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೀದರ್, ಕಲ್ಬುರ್ಗಿ, ಬಿಜಾಪುರ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಮುಂಬೈ ಕರ್ನಾಟಕದ ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಕಾಂಗ್ರೆಸ್‍ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿಯ ಕಮಲ ಅರಳಿದೆ. ಒಟ್ಟಾರೆ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿದ ಫಲಿತಾಂಶ ಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ