ಬೆಂಗಳೂರು: ಕಲಬುರಗಿಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಿ, ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿರುವ ಡಾ. ಉಮೇಶ್ ಜಾಧವ್ ಅವರು ಕೇಂದ್ರದಲ್ಲಿ ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳುವ ಮೂಲಕ ತಾವೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಜಾಧವ್, ನಾನಾಗಿಯೇ ಸಚಿವ ಸ್ಥಾನ ಅಪೇಕ್ಷಿಸುವುದಿಲ್ಲ. ಆದರೆ ನಾನು ಸಮರ್ಥನಿದ್ದೇನೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂತ್ರಿ ಸ್ಥಾನ ಕೊಟ್ಟರೆ ಅದನ್ನು ಸಮರ್ಥವಾಗಿ ನಿಭಾಯಿಸಿ ಉತ್ತಮ ಕೆಲಸ ಮಾಡಿ ತೋರಿಸುತ್ತೇನೆ.
ನಾನು ಮೊದಲಿನಿಂದಲೂ ಮೈತ್ರಿ ಸರ್ಕಾರವನ್ನು ವಿರೋಧಿಸುತ್ತಿದ್ದೇನೆ. ನನ್ನ ಕ್ಷೇತ್ರಕ್ಕೆ ಬರಬೇಕಿದ್ದ ಅನುದಾನವನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿತ್ತು. ಹಾಗಾಗಿ ನಾನು ಕಾಂಗ್ರೆಸ್ ತೊರೆದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದೆ. ನಾವು ಮೈತ್ರಿ ಸರ್ಕಾರವನ್ನು ಬೀಳಿಸುವ ಅಗತ್ಯವಿಲ್ಲ. ಸರ್ಕಾರ ಅದಾಗಿಯೇ ಬೀಳಲಿದೆ ಎಂದರು.
ಇದೇ ವೇಳೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಂಜೆಯೊಳಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
Bangalore,BJP,umesh jadhav