ಬೆಂಗಳೂರು,ಮೇ 25-ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮಣ್ಣ ಸ್ಪಷ್ಟಪಡಿಸಿದ್ದಾರೆ.
ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಆಧಾರರಹಿತವಾಗಿದ್ದು, ಈವರೆಗೆ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.
ಬಹಳ ಹಿಂದೆಯೇ ಶೇ.18ರಷ್ಟು ಪ್ರಯಾಣದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದುವರೆಗೂ ಸರ್ಕಾರ ಪ್ರಯಾಣ ದರ ಹೆಚ್ಚಳಕ್ಕೆ ಅನುಮತಿ ನೀಡಿಲ್ಲ. ಡೀಸೆಲ್ ದರ ಏರಿಕೆಯೊಂದರಲ್ಲಿ ವಾರ್ಷಿ 600 ಕೋಟಿ ರೂ.ನಷ್ಟು ನಷ್ಟವಾಗುತ್ತಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಶೇ.25ರಷ್ಟು ರಿಯಾಯ್ತಿ ದರದ ಬಸ್ ಪಾಸ್ ನೀಡುತ್ತಿರುವುದರಿಂದ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗುತ್ತಿದೆ ಎಂದು ಹೇಳಿದರು.
ಕೆಎಸ್ಆರ್ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯಸಾರಿಗೆ ಸಂಸ್ಥೆಗಳು ಅನುಭವಿಸುತ್ತಿರುವ ನಷ್ಟ ಸರಿದೂಗಿಸಲು ಪ್ರಯಾಣ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಇಲ್ಲದಿದ್ದರೆ ಸರ್ಕಾರವೇ ಅನುದಾನ ಕೊಡಬೇಕಾಗುತ್ತದೆ.
ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.