ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್- ಸಿಎಂ ಕುಮಾರಸ್ವಾಮಿ ಭೇಟಿ

ಬೆಂಗಳೂರು, ಮೇ 25- ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.

ಜೆಪಿನಗರದ ನಿವಾಸದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದ ವಿಶ್ವನಾಥ್, ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಪ್ರಯತ್ನಗಳು, ಮತ್ತೆ ಆಪರೇಷನ್ ಕಮಲದ ಯತ್ನ ಸೇರಿದಂತೆ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ಮಾಡಿದರು ಎಂದು ಉನ್ನತ ಮೂಲಗಳು ತಿಳಿಸಿವೆ.

ನಿನ್ನೆ ರಾತ್ರಿ ಕುಮಾರಸ್ವಾಮಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ, ಸರ್ಕಾರವನ್ನು ಮುನ್ನಡೆಸುವ ಮತ್ತು ಆಡಳಿತ ಪಕ್ಷದ ಶಾಸಕರು ಪಕ್ಷಾಂತರಗೊಳ್ಳದಂತೆ ತಡೆಯುವ ಪ್ರಯತ್ನಗಳ ಸಮಾಲೋಚನೆ ಮಾಡಿದ್ದರು.

ವಿಶ್ವನಾಥ್ ಭೇಟಿ ಸಂದರ್ಭದಲ್ಲಿ ಸಿದ್ದರಾಮಯ್ಯನವರೊಂದಿಗೆ ಸಮಾಲೋಚನೆ ನಡೆಸಲಾದ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಎನ್ನಲಾಗಿದೆ.

ಚುನಾವಣೆ ಮುಗಿದಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಜನರ ನಿರೀಕ್ಷೆಗೆ ತಕ್ಕಂತೆ ಚುರುಕಾಗಿ ಕಾರ್ಯ ನಿರ್ವಹಿಸಬೇಕು, ಅಲ್ಲದೆ ಮಿತ್ರ ಪಕ್ಷದ ಶಾಸಕರು ಅಸಮಾಧಾನಗೊಳ್ಳದಂತೆ ಅವರ ಕ್ಷೇತ್ರಗಳಲ್ಲಿ ಅಭಿವೃದ್ದಿ ಕಾರ್ಯಗಳನ್ನು ಅನುಷ್ಠಾನಗೊಳುವುದು ಸೇರಿದಂತೆ ಸರ್ಕಾರಕ್ಕೆ ಎದುರಾಗಿರುವ ಅಡೆತಡೆಗಳನ್ನು ನಿವಾರಿಸುವ ಕಾರ್ಯತಂತ್ರದ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ