ಬೆಂಗಳೂರು, ಮೇ 28-ಲೋಕಸಭೆ ಚುನಾವಣೆ ಮುಗಿದು ನೀತಿಸಂಹಿತೆ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಇಲಾಖಾವಾರು ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಿದ್ದಾರೆ.
ಒಂದೆಡೆ ಆಪರೇಷನ್ ಕಮಲದಿಂದ ಸರ್ಕಾರ ಅತಂತ್ರಕ್ಕೆ ಸಿಲುಕಲಿದೆ ಎಂಬ ಗೊಂದಲಗಳ ನಡುವೆಯೂ ರಾಜಕೀಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳದೆ ಅಭಿವೃದ್ಧಿಯತ್ತ ಗಮನಹರಿಸಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಇತ್ತೀಚೆಗೆ ಸಿಇಟಿ ಪರೀಕ್ಷೆ ಪ್ರಕಟಗೊಂಡಿದ್ದು ಜೂ.6 ರಿಂದ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ದಾಖಲಾತಿಗಳ ಪರಿಶೀಲನೆ ನಡೆಯಲಿದೆ. ಆ ಸಂದರ್ಭದಲ್ಲಿ ಯಾವುದೇ ಗೊಂದಲಗಳಾಗದಂತೆ ಎಚ್ಚರಿಕೆ ವಹಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಇಂಜಿನಿಯರಿಂಗ್ ಶುಲ್ಕವನ್ನು ಹೆಚ್ಚಳ ಮಾಡಿರುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಆರಂಭಗೊಳ್ಳಲಿದ್ದು, ಈ ಸಂದರ್ಭದಲ್ಲಿ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸರ್ಕಾರದಿಂದ ಸಾಧ್ಯವಾದಷ್ಟು ಸಹಾಯ ಮಾಡಲು ಸಿಎಂ ಸೂಚನೆ ನೀಡಿದ್ದಾರೆ.