ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸುತ್ತಿದ್ದಂತೆ ಆಪರೇಷನ್ ಕಮಲದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಈ ವಿಚಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಚಿಂತೆಗೀಡು ಮಾಡಿದ್ದು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯಬಾರದು ಎನ್ನುವ ಖಡಕ್ ಸೂಚನೆ ನೀಡಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಯಾವುದೇ ಕಾರಣಕ್ಕೂ ರಚನೆ ಆಗಬಾರದು ಎನ್ನುವ ನಿರ್ದೇಶನವನ್ನು ರಾಜ್ಯ ನಾಯಕರಿಗೆ ರಾಹುಲ್ ನೀಡಿದ್ದಾರೆ. ಜೊತೆಗೆ ಪಕ್ಷದ ಭವಿಷ್ಯದ ದೃಷ್ಟಿಯಿಂದ ಕೆಲವರು ಸಚಿವ ಸ್ಥಾನ ತ್ಯಾಗಮಾಡಲೇಬೇಕು ಎಂದಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ಕೆ.ಸಿ ವೇಣುಗೋಪಾಲ್ ಜೊತೆ ರಾಹುಲ್ ಗಾಂಧಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ರಾಹುಲ್ ಸೂಚನೆ ಮೇರೆಗೆ ಕೆಸಿ ವೇಣುಗೋಪಾಲ್ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಇಂದು ಸಂಜೆ ಬೆಂಗಳೂರಿನಲ್ಲಿ ಕೆಸಿ ವೇಣುಗೋಪಾಲ್ ಮಹತ್ವದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹಾಗೂ ಕೆಲ ಕೈ ಸಚಿವರ ರಾಜೀನಾಮೆ ವಿಚಾರದ ಕುರಿತು ಚರ್ಚೆಯಾಗಲಿದೆ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿ ಕಾಂಗ್ರೆಸ್ನ ಎಲ್ಲಾ ಸಚಿವರು ಪಾಳ್ಗೊಳ್ಳಲಿದ್ದಾರೆ. ಈ ವೇಳೆ ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವರಿಗೆ ಪಕ್ಷದಲ್ಲಿ ವಿಶೇಷ ಹುದ್ದೆ ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ಅತೃಪ್ತರಿಗೆ ಸಚಿವ ಸ್ಥಾನ ನೀಡಿ ಸರ್ಕಾರ ಉಳಿಸಿಕೊಳ್ಳುವ ಆಲೋಚನೆ ಅವರದ್ದು.