ಬೆಂಗಳೂರು, ಮೇ 29- ಯಾವುದೇ ಕಾರಣಕ್ಕೂ ನಾವು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈ ಹಾಕುವುದಿಲ್ಲ. ಒಂದು ವೇಳೆ ಎರಡೂ ಪಕ್ಷಗಳ ನಾಯಕರು ಕಿತ್ತಾಡಿಕೊಂಡು ಸರ್ಕಾರ ಪತನವಾದರೆ ನಾವು ಸರ್ಕಾರ ರಚಿಸುತ್ತೇವೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಶಾಸಕರು ಚುನಾವಣೆ ಎದುರಿಸುವ ಪರಿಸ್ಥಿತಿಯಲ್ಲಿಲ್ಲ. ಮಧ್ಯಂತರ ಚುನಾವಣೆಯನ್ನು ನಾವು ಕೂಡ ಬಯಸುತ್ತಿಲ್ಲ. ಸಮ್ಮಿಶ್ರ ಸರ್ಕಾರ ಪತನವಾದರೆ ದೊಡ್ಡ ಪಕ್ಷವಾಗಿ ನಾವು ಕೈ ಕಟ್ಟಿ ಕೂರಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವೆ ಸಂಬಂಧ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಉಭಯ ಪಕ್ಷಗಳ ನಡುವೆ ಅಸಮಾಧಾನ, ಅಪನಂಬಿಕೆ ಮೂಡಿದೆ. ಯಾವುದೇ ಸಂದರ್ಭದಲ್ಲೂ ಸರ್ಕಾರ ಪತನವಾಗುವುದಿಲ್ಲ. ಆದರೆ, ನಾವು ಮಾತ್ರ ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈ ಹಾಕುವುದಿಲ್ಲ ಎಂದು ಪುನರುಚ್ಚರಿಸಿದರು.
ಜೂ.5ರಂದು ಪಕ್ಷದ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಅಲ್ಲಿ ಮುಂದಿನ ಹೋರಾಟಗಳ ಬಗ್ಗೆ ಚರ್ಚಿಸಲಾಗುವುದು. ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ರಾಜ್ಯದ ಸಮಸ್ಯೆಗಳನ್ನಿಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಬಳ್ಳಾರಿ ಜಿಲ್ಲೆಯ ಜಿಂದಾಲ್ ಸಂಸ್ಥೆಗೆ ಜಮೀನು ಕೊಟ್ಟಿರುವುದನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು. ಯಾವುದೇ ಕಾರಣಕ್ಕೂ ಜಮೀನು ನೀಡಬಾರದು. ಈ ಕುರಿತಂತೆ ಪಕ್ಷದ ವತಿಯಿಂದ ಹೋರಾಟ ನಡೆಸಲು ವೇದಿಕೆ ಸಿದ್ಧಪಡಿಸುತ್ತಿದ್ದೇವೆ. ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ ತೀರ್ಮಾನವನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿದರು.
ಈ ಬಾರಿ ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ ಹೆಚ್ಚಿನ ಸ್ಥಾನಮಾನಗಳು ಸಿಗುವ ಸಂಭವವಿದೆ. ಇಂದು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾ ಸೇರಿದಂತೆ ಕೆಲವು ನಾಯಕರನ್ನು ಭೇಟಿ ಮಾಡಲಿದ್ದೇವೆ. ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನಮಾನಗಳು ಸಿಗಲಿವೆ ಎಂಬ ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದರು.