ಹೈಕಮಾಂಡ್ ನಿರ್ಧಾರಕ್ಕೆ ಎಲ್ಲಾ ಸಚಿವರು ಬದ್ದರಾಗಿರಬೇಕು

ಬೆಂಗಳೂರು, ಮೇ 30- ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ ಎಲ್ಲ ಸಚಿವರೂ ಅದಕ್ಕೆ ಬದ್ಧರಾಗಿರಬೇಕೆಂದು ಕಾಂಗ್ರೆಸ್ ಸೂಚನೆ ನೀಡಿದೆ.

ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಗೃಹ ಕಚೇರಿಯಲ್ಲಿಂದು ಸಚಿವರಿಗಾಗಿ ಏರ್ಪಡಿಸಲಾಗಿದ್ದ ಉಪಹಾರ ಕೂಟದಲ್ಲಿ ಎಲ್ಲ ಸಚಿವರು ಭಾಗವಹಿಸಿದ್ದರು.

ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಉಪಮುಖ್ಯಮಂತ್ರಿ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಭೆಯಲ್ಲಿ ಮಾತನಾಡಿ, ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಹೈಕಮಾಂಡ್ ಯಾರ ಸಂಪರ್ಕವನ್ನೂ ಮಾಡದೆ ನಿರ್ಧಾರ ತೆಗೆದುಕೊಳ್ಳಬಹುದು. ಅದಕ್ಕೆ ಎಲ್ಲ ಸಚಿವರೂ ಬದ್ಧರಾಗಿರಬೇಕು ಎಂದು ಸೂಚಿಸಿದ್ದಾರೆ. ಇದಕ್ಕೆ ಎಲ್ಲ ಸಚಿವರೂ ಸಹಮತ ವ್ಯಕ್ತಪಡಿಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ದಿನೇಶ್ ಗುಂಡೂರಾವ್ ಸಂಪುಟ ಪುನಾರಚನೆ ಮತ್ತು ವಿಸ್ತರಣೆ ಕುರಿತು ಸಭೆಯಲ್ಲಿ ಚರ್ಚೆಯಾಗಿದೆ. ಎಲ್ಲವನ್ನೂ ಬಹಿರಂಗ ಮಾಡಲು ಸಾಧ್ಯವಿಲ್ಲ. ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್‍ಗೆ ಬಿಡಲಾಗಿದೆ. ಅವರು ಯಾರ ಅಭಿಪ್ರಾಯವನ್ನೂ ಕೇಳದೆ ನಿರ್ಧಾರ ತೆಗೆದುಕೊಳ್ಳಬಹುದು. ಅದಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ನಮ್ಮ ಮೂಲ ಉದ್ದೇಶ ಉತ್ತಮ ಸರ್ಕಾರ ನೀಡುವುದು. ಅದಕ್ಕಾಗಿ ಅಗತ್ಯವಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತೇವೆ. ಸ್ಥಿರ ಸರ್ಕಾರಕ್ಕೆ ಬೇಕಾದ ಎಲ್ಲ ನಿರ್ಧಾರಗಳನ್ನೂ ಕಾಂಗ್ರೆಸ್ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ