ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾಜಿ ಕಾರ್ಯದರ್ಶಿ ಎಸ್. ಜೈಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಜೈಶಂಕರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಜೈಶಂಕರ್ ಅವರು ಜನವರಿ 2015 ರಿಂದ ಜನವರಿ 2018ರ ವರೆಗೆ ವಿದೇಶಾಂಗ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ದೇಶದ ವಿದೇಶಾಂಗ ನೀತಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಲಡಾಕ್ನ ದೆಪ್ಸಾಂಗ್ ಮತ್ತು ಡೋಕ್ಲಾಮ್ನಲ್ಲಿ ಚೀನಾದೊಂದಿಗೆ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು.
ಸೇವೆಯಿಂದ ನಿವೃತ್ತರಾದ ನಂತರ ಜೈಶಂಕರ್ ಅವರು ಟಾಟಾ ಗ್ರೂಪ್ನ ಗ್ಲೋಬಲ್ ಕಾರ್ಪೊರೇಟ್ ಅಫೇರ್ಸ್ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
1977ರಲ್ಲಿ ಭಾರತೀಯ ವಿದೇಶಾಂಗ ಸೇವೆಗೆ ಸೇರ್ಪಡೆಯಾಗಿದ್ದ ಜೈಶಂಕರ್ ಅವರು ಸಿಂಗಾಪುರ, ಚೀನಾ ಮತ್ತು ಅಮೆರಿಕದಲ್ಲಿ ಭಾರತೀಯ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.