ಬೆಂಗಳೂರು, ಮೇ 31-ನಮ್ಮ ರಾಜ್ಯ ಸುರಕ್ಷಿತ ವಲಯದಲ್ಲಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಗೃಹ ಸಚಿವ ಎಂ.ಬಿ.ಪಾಟೀಲ್, ಸಂಚಾರ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸಿಸಿಟಿವಿ ಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಿಪಿಪಿ ಮಾದರಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸಿಸಿ ಟಿವಿಗಳನ್ನು ಅಳವಡಿಸಲಾಗುವುದು. ಈಗಾಗಲೇ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ಮೆಟ್ರೋ ರೈಲು ನಿಲ್ದಾಣದ ಶಂಕಿತ ವ್ಯಕ್ತಿ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದರು.
ಇಂದು ನಗರದ ರೈಲು ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆಯಾಗಿರುವ ಬಗ್ಗೆ ತನಿಖೆ ಮುಂದುವರೆಸಲಾಗಿದ್ದು, ಆತಂಕಪಡುವ ಅಗತ್ಯವಿಲ್ಲ. ಆದರೂ ರೈಲು, ಬಸ್ ನಿಲ್ದಾಣಗಳಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಒದಗಿಸಲಾಗಿದೆ ಎಂದರು.
ತನಿಖೆಗೆ ಮತ್ತು ಕಾನೂನು ಸುವ್ಯವಸ್ಥೆ ಕಾರ್ಯಕ್ಕೆ ಪ್ರತ್ಯೇಕ ಅಧಿಕಾರಿಗಳನ್ನು ನೇಮಕ ಮಾಡುವ ಚಿಂತನೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳು ಸೇರಿದಂತೆ ಆಧುನಿಕ ಅಪರಾಧ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಕಾಯಕಲ್ಪ ನೀಡಲಾಗುವುದು ಎಂದರು.
ಹಿರಿಯ ಪೊಲೀಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ಅವರ ವರದಿಯ ಆಧರಿಸಿ ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಿದ್ದು, ಇನ್ನೊಂದು ವಾರದೊಳಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.