ನಾಳೆ ಜೆಡಿಎಸ್ ಶಾಸಕರ ಸಭೆ ನಡೆಸಲಿರುವ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ.3- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಸಂಜೆ ಜೆಡಿಎಸ್ ಶಾಸಕರ ಮಹತ್ವದ ಸಭೆ ನಡೆಸಲಿದ್ದಾರೆ.

ಜೆಪಿ ನಗರದ ತಮ್ಮ ನಿವಾಸದಲ್ಲಿ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಸಭೆ ನಡೆಸಲಿರುವ ಮುಖ್ಯಮಂತ್ರಿ ಪ್ರಚಲಿತ ರಾಜಕೀಯ ವಿದ್ಯಮಾನಗಳು, ಲೋಕಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ, ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಸುಭದ್ರಗೊಳಿಸಿಕೊಂಡು ಮುನ್ನಡೆಸುವ ಬಗ್ಗೆ ಕೈಗೊಳ್ಳಬೇಕಿರುವ ಕಾರ್ಯತಂತ್ರಗಳ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಅತಂತ್ರ ಫಲಿತಾಂಶ ಬಂದಿರುವ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯುವ ಬಗ್ಗೆಯೂ ಗಂಭೀರ ಚರ್ಚೆ ನಡೆಯಲಿದೆ.

ಆಪರೇಷನ್ ಕಮಲಕ್ಕೆ ಶಾಸಕರು ಒಳಗಾಗದೆ ಒಗ್ಗಟ್ಟಿನಿಂದ ಇರಬೇಕು. ಯಾವುದೇ ಕಾರಣಕ್ಕೂ ಆಮಿಷಕ್ಕೆ ಒಳಗಾಗಬಾರದು. ಸರ್ಕಾರದಲ್ಲಿ ಸಾಧ್ಯವಿರುವ ಸೂಕ್ತ ಸ್ಥಾನಮಾನಗಳನ್ನು ಶಾಸಕರಿಗೆ ನೀಡಲಾಗುವುದು.ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕೆಲವು ಸಚಿವ ಸ್ಥಾನಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಬೇಕಾದ ಅನಿವಾರ್ಯತೆಯನ್ನು ಕುಮಾರಸ್ವಾಮಿ ಶಾಸಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.

ಹಾಲಿ ಶಾಸಕರು ಕೂಡ ಸಚಿವ ಸ್ಥಾನ ಬಿಟ್ಟುಕೊಡಬೇಕಾದ ಅಗತ್ಯಬಿದ್ದರೆ ಸಿದ್ಧವಾಗಿರಬೇಕು ಎಂಬುದು ಸೇರಿದಂತೆ ಪ್ರಚಲಿತ ರಾಜಕೀಯ ವಿದ್ಯಮಾನಗಳು, ಪಕ್ಷದ ಸಂಘಟನೆ ಬಗ್ಗೆ ಗಂಭೀರ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕ ಎಚ್.ವಿಶ್ವನಾಥ್ ಮತ್ತೆ ರಾಜೀನಾಮೆ ನೀಡಲು ಮುಂದಾಗಿರುವ ವಿಚಾರದ ಬಗ್ಗೆಯೂ ಗಂಭೀರ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಸಚಿವ ಸಾ.ರಾ.ಮಹೇಶ್ ಅವರೊಂದಿಗೆ ವಿಶ್ವನಾಥ್ ಅಸಮಾಧಾನಗೊಂಡಿರುವ ವಿಚಾರ, ಪಕ್ಷದ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ