ಬೆಂಗಳೂರು, ಜೂ.3-ಮೇಕೆದಾಟು ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಸಮಗ್ರ ಯೋಜನಾ ಕ್ರಿಯಾವರದಿ (ಡಿಪಿಎಆರ್) ಯೋಜನೆಯನ್ನು ಸಿದ್ಧಪಡಿಸುವಂತೆ ರಾಜ್ಯಸರ್ಕಾರಕ್ಕೆ ಪತ್ರ ಬರೆಯುವುದಾಗಿ ಕೇಂದ್ರದ ನೂತನ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ಮೇಕೆದಾಟು ಯೋಜನೆ ಅನುಷ್ಠಾನವಾದರೆ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗದ ನಾನಾ ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುತ್ತದೆ. ಹೀಗಾಗಿ ವರದಿ ಸಿದ್ಧಪಡಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಶೀಘ್ರದಲ್ಲೇ ಪತ್ರ ಬರೆಯುತ್ತೇನೆ. ಆದಷ್ಟು ಬೇಗ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೇ ಯೋಜನೆ ಅನುಷ್ಠಾನವಾಗಬೇಕಿತ್ತು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದ ನೆನೆಗುದಿಗೆ ಬಿದ್ದಿದೆ. ನನ್ನ ಪತ್ರಕ್ಕೆ ರಾಜ್ಯ ಸರ್ಕಾರ ನೀಡುವ ಪ್ರತಿಕ್ರಿಯೆ ನೋಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದರು.
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವುದು ಹಾಗೂ ಹೊಸ ಯೋಜನೆಗಳನ್ನು ರಾಜ್ಯಕ್ಕೆ ತರುವ ವಿಷಯದಲ್ಲಿ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ. ನಾನು ಸಂಸದನಾಗಿ ನನ್ನ ರಾಜ್ಯಕ್ಕೆ ಏನು ಕೊಡುಗೆ ಕೊಡಬೇಕೆಂಬ ಪರಿಕಲ್ಪನೆ ನನಗಿದೆ ಎಂದರು.
ಹಿಂದೆ ಸಚಿವನಾಗಿದ್ದ ವೇಳೆ ರಾಜಧಾನಿ ಬೆಂಗಳೂರು ಸೇರಿದಂತೆ ಬೇರೆ ಬೇರೆ ಕಡೆ ನನ್ನ ಇಲಾಖೆಯಡಿ ರಾಜ್ಯಕ್ಕೆ ಸೂಕ್ತ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಮುಂದೆಯೂ ಕೂಡ ನನ್ನ ಈ ಪ್ರಯತ್ನ ಮುಂದುವರೆಯುತ್ತದೆ. ಅಭಿವೃದ್ಧಿ ವಿಷಯದಲ್ಲಿ ಯಾರೊಬ್ಬರೂ ರಾಜಕಾರಣ ಮಾಡಬಾರದು ಎಂದು ಸದಾನಂದಗೌಡ ಮನವಿ ಮಾಡಿದರು.
ನಾನು ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ಗಂಟೆಯಲ್ಲೇ ಇಲಾಖೆಗೆ ಸಂಬಂಧಿಸಿದಂತೆ 100 ದಿನಗಳ ಕ್ರಿಯಾಯೋಜನೆಯನ್ನು ನೀಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರು 100 ದಿನಗಳ ಕ್ರಿಯಾ ಯೋಜನೆ ನೀಡುವಂತೆ ಸೂಚನೆ ನೀಡಿದ್ದರು. ಈಗಾಗಲೇ ಎಲ್ಲಾ ಸಚಿವರು ತಮ್ಮ ತಮ್ಮ ಇಲಾಖೆಯ ವರದಿಯನ್ನು ಸಲ್ಲಿಸಿದ್ದಾರೆ. ಜನರ ನಿರೀಕ್ಷೆ ಗೆ ತಕ್ಕಂತೆ ಆಡಳಿತ ನೀಡುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.
ಪ್ರತಿ ತಿಂಗಳಿಗೊಮ್ಮೆ ರಾಜ್ಯವನ್ನು ಪ್ರತಿನಿಧಿಸುವ ನಾಲ್ವರು ಸಚಿವರು ರಾಜ್ಯಕ್ಕೆ ಏನು ಮಾಡಬೇಕು ಎಂಬ ಬಗ್ಗೆ ಸಭೆ ಸೇರುತ್ತೇವೆ. ಅದೇ ರೀತಿ 15 ದಿನಗಳಿಗೊಮ್ಮೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲೂ ಸಭೆ ನಡೆಸಲಾಗುವುದು. ನಮಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ, ಉಳಿದ ದಿನಗಳಲ್ಲಿ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುವುದಷ್ಟೆ ನಮ್ಮ ಕೆಲಸ ಎಂದು ಸ್ಪಷ್ಟಪಡಿಸಿದರು.
ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಿದ ಸದಾನಂದಗೌಡರು, ಸಮ್ಮಿಶ್ರ ಸರ್ಕಾರ ಗೊಂದಲದ ಗೂಡಾಗಿದೆ. ಹೇಗಾದರೂ ಮಾಡಿ ಸರ್ಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೆಣಗಾಡುತ್ತಿದ್ದಾರೆ. ಹೇಗಾದರೂ ಮಾಡಿ ಸರ್ಕಾರವನ್ನು ಅಸ್ಥಿರಗೊಳಿಸಬೇಕೆಂದು ಸಿದ್ದರಾಮಯ್ಯ ಹವಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಈ ಚುನಾವಣೆಯಲ್ಲಿ ಯಾವುದೇ ಮಾಟ, ಮಂತ್ರ, ಪೂಜೆ ಯಾವುದೂ ನಡೆಯಲಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎಷ್ಟು ಕಡ ಪೂಜೆ ಪುನಸ್ಕಾರ ಮಾಡಿದರು ಎಲ್ಲರಿಗೂ ಗೊತ್ತು. ಆದರೆ ಅವರ ಪರಿಸ್ಥಿತಿ ಏನಾಗಿದೆ ಎಂದು ಪ್ರಶ್ನಿಸಿದರು.
ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ನಿಂಬೆಹಣ್ಣು ಚುನಾವಣೆ ಸಂದರ್ಭದಲ್ಲಿ ಸದ್ದು ಮಾಡಿತೇ ಹೊರತು ಮತದಾರರ ಮೇಲೆ ಪ್ರಭಾವ ಬೀರಲಿಲ್ಲ. ಒಂದು ಬಾರಿ ಮತದಾರ ತೀರ್ಪು ನೀಡಿದರೆ ಯಾವ ನಿಂಬೆಹಣ್ಣುಗಳು ಕೂಡ ಏನೂ ಮಾಡಲು ಸಾಧ್ಯವಿಲ್ಲ ಎಂದು ಕುಹಕವಾಡಿದರು.
ಕುಮಾರಸ್ವಾಮಿಯವರ ಗ್ರಾಮವಾಸ್ತವ್ಯ ಒಂದು ಗಿಮಿಕ್. ಶಾಲೆಗೆ ಕಲಿಯಲು ಮಕ್ಕಳು ಹೋಗುತ್ತಾರೆ, ಈಗ ಕುಮಾರಸ್ವಾಮಿಯವರು ಆಡಳಿತ ನಡೆಸಲು ಕಲಿಯಲು ಹೋಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.