ಶಾಸಕ ರಾಮಲಿಂಗಾರೆಡ್ಡಿಯವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳುವಂತೆ ಕಾರ್ಯಕರ್ತರ ಒತ್ತಾಯ

ಬೆಂಗಳೂರು, ಜೂ.4- ಮಾಜಿ ಗೃಹ ಸಚಿವರು ಮತ್ತು ಪ್ರಭಾವಿ ಶಾಸಕರಾದ ರಾಮಲಿಂಗಾರೆಡ್ಡಿ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿ ಕೆಪಿಸಿಸಿ ಕಚೇರಿ ಮುಂದೆ ಬಿಬಿಎಂಪಿ ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಮಾಜಿ ಮೇಯರ್ ಮಂಜುನಾಥರೆಡ್ಡಿ, ಪಾಲಿಕೆ ಸದಸ್ಯರಾದ ಜಿ.ಮಂಜುನಾಥ್, ಟಿ.ರಾಮಚಂದ್ರ, ಚಂದ್ರಪ್ಪ, ಬಿಬಿಎಂಪಿ ಮಾಜಿ ಸದಸ್ಯರಾದ ಮುನಿಸಂಜೀವಯ್ಯ, ಜಿ.ಎನ್.ಆರ್.ಬಾಬು ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಮಂಜುನಾಥರೆಡ್ಡಿ ಮಾತನಾಡಿ, ರಾಮಲಿಂಗಾರೆಡ್ಡಿಯವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರು. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದಾಗ ನಗರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಮ್ಮ ಪಕ್ಷ ಸಂಘಟನೆಯಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದ್ದಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಸರಳ-ಸಜ್ಜನ ರಾಜಕಾರಣಿ ಎಂದೇ ಅವರು ಚಿರಪರಿಚಿತರಾಗಿದ್ದಾರೆ ಎಂದು ಹೇಳಿದರು.

ಪಕ್ಷ ನಿಷ್ಠೆ, ಸಿದ್ಧಾಂತಗಳನ್ನು ನಂಬಿರುವ ಮುಖಂಡರನ್ನು ಕಾಂಗ್ರೆಸ್‍ನ ಹಿರಿಯ ನಾಯಕರು ಗಮನಿಸಬೇಕು. ನಮ್ಮ ಪಕ್ಷದ ಹಿರಿಯ ಶಾಸಕರಾಗಿರುವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಕಾರ್ಯಕರ್ತರ ಆಶಯಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ ಮುಖಂಡರು:
ಕಾಂಗ್ರೆಸ್ ಪಕ್ಷದಲ್ಲಿ ಕೆಲ ಶಾಸಕರು ಅಧಿಕಾರಕ್ಕಾಗಿ ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಮತ್ತು ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಕೊಟ್ಟು ಸರಳ-ಸಜ್ಜನಿಕೆಯ ಮತ್ತು ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಇಂದು ಬೆಂಗಳೂರು ಮಹಾನಗರ ಕಾಂಗ್ರೆಸ್‍ನ ಕೆಲ ಮುಖಂಡರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬೆಂಗಳೂರು ನಗರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ 15ಕ್ಕೂ ಹೆಚ್ಚು ಶಾಸಕರು ಆಯ್ಕೆಯಾಗಲು ಪಕ್ಷಕ್ಕಾಗಿ ಹಗಲಿರುಳು ದುಡಿದು ಶ್ರಮಿಸಿದ ನಿಷ್ಠಾವಂತ ಕಾರ್ಯಕರ್ತರ ಪಾತ್ರವಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಇಂತಹವರನ್ನು ನಿರ್ಲಕ್ಷ್ಯ ಮಾಡಿ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇರುವುದೇ ಪಕ್ಷಕ್ಕೆ ಹಿನ್ನಡೆಯಾಗಲು ಕಾರಣವಾಗಿದೆ.

ಈಗಾಗಲೇ ಅನೇಕ ಹಿರಿಯ ಸಚಿವರು ಸರ್ಕಾರದಲ್ಲಿದ್ದಾರೆ. ಕೆಲವರು ಉತ್ತಮ ಕೆಲಸ ಮಾಡಿದರೆ, ಇನ್ನೂ ಕೆಲವರು ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ. ಕೆಲವರು ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ, ಕೆಲ ಶಾಸಕರು ಬಹಿರಂಗವಾಗಿಯೇ ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆ ತಿಲಾಂಜಲಿ ಹಾಡಲು ಶಿಸ್ತುಕ್ರಮ ಕೈಗೊಳ್ಳುವುದು ಅಗತ್ಯ ಎಂದು ಒತ್ತಾಯಿಸಿದ್ದಾರೆ.

ಎಐಸಿಸಿ ಅಧ್ಯಕ್ಷರಿಗೆ ಈ ವಿಷಯವನ್ನು ಗಮನಕ್ಕೆ ತಂದು ಸ್ವಾರ್ಥಕ್ಕಾಗಿ, ಕೆಲವು ನಾಯಕರ ರಕ್ಷಣೆಗಾಗಿ ಪಕ್ಷವನ್ನು ಬಲಿ ಕೊಡುವುದು ಬೇಡ. ಬೆಂಗಳೂರಿನಲ್ಲಿ ಪ್ರಭಾವಿ ನಾಯಕರು ಹಾಗೂ ಸರಳ-ಸಜ್ಜನಿಕೆ ಹೊಂದಿರುವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಿದರೆ ಅದು ಕಾಂಗ್ರೆಸ್‍ನ ಸಂಘಟನೆಗೂ ಸಹಕಾರಿಯಾಗುತ್ತದೆ ಎಂದು ಕವಿಕಾ ಮಾಜಿ ಅಧ್ಯಕ್ಷ ಮನೋಹರ್, ಕಾರ್ಯಕರ್ತರಾದ ಆನಂದ್, ರಮೇಶ್, ಜಲೀಲುಲ್ಲಾ, ಪುಟ್ಟರಾಜು ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ