ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು, ಜೂ.4- ಸಚಿವ ಸಂಪುಟ ವಿಸ್ತರಣೆ, ಪ್ರಚಲಿತ ರಾಜಕೀಯ ವಿದ್ಯಮಾನ, ಪಕ್ಷದ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ.

ಜೆಪಿ ನಗರದ ತಮ್ಮ ನಿವಾಸದಲ್ಲಿ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಸಭೆ ನಡೆಸಲಿರುವ ಮುಖ್ಯಮಂತ್ರಿ ಪ್ರಚಲಿತ ರಾಜಕೀಯ ವಿದ್ಯಮಾನಗಳು, ಲೋಕಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ, ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮತ್ತು ಸಚಿವ ಸಾ.ರಾ.ಮಹೇಶ್ ನಡುವಿನ ಅಸಮಾಧಾನ ಹಾಗೂ ಪಕ್ಷದ ಪದಾಧಿಕಾರಿಗಳ ನೇಮಕದ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಗಳಿವೆ.

ನಿಗಮ-ಮಂಡಳಿಗಳ ನೇಮಕದ ವಿಚಾರ, ಮುಖ್ಯಮಂತ್ರಿ ಕೈಗೊಳ್ಳಲಿರುವ ಗ್ರಾಮ ವಾಸ್ತವ್ಯ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಶಾಸಕರೊಂದಿಗೆ ಸಮಾಲೋಚಿಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಸುಭದ್ರಗೊಳಿಸಿಕೊಂಡು ಮುನ್ನಡೆಸುವ ಬಗ್ಗೆ ಕೈಗೊಳ್ಳಬೇಕಿರುವ ಕಾರ್ಯತಂತ್ರಗಳ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಅತಂತ್ರ ಫಲಿತಾಂಶ ಬಂದಿರುವ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯುವ ಬಗ್ಗೆಯೂ ಗಂಭೀರ ಚರ್ಚೆ ನಡೆಯಲಿದೆ.

ಆಪರೇಷನ್ ಕಮಲಕ್ಕೆ ಶಾಸಕರು ಒಳಗಾಗದೆ ಒಗ್ಗಟ್ಟಿನಿಂದ ಇರಬೇಕು. ಯಾವುದೇ ಕಾರಣಕ್ಕೂ ಆಮಿಷಕ್ಕೆ ಒಳಗಾಗಬಾರದು. ಸರ್ಕಾರದಲ್ಲಿ ಸಾಧ್ಯವಿರುವ ಸೂಕ್ತ ಸ್ಥಾನಮಾನಗಳನ್ನು ಶಾಸಕರಿಗೆ ನೀಡಲಾಗುವುದು. ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕೆಲವು ಸಚಿವ ಸ್ಥಾನಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಬೇಕಾದ ಅನಿವಾರ್ಯತೆಯನ್ನು ಕುಮಾರಸ್ವಾಮಿ ಶಾಸಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.

ಹಾಲಿ ಶಾಸಕರು ಕೂಡ ಸಚಿವ ಸ್ಥಾನ ಬಿಟ್ಟುಕೊಡಬೇಕಾದ ಅಗತ್ಯಬಿದ್ದರೆ ಸಿದ್ಧವಾಗಿರಬೇಕು ಎಂಬುದು ಸೇರಿದಂತೆ ಪ್ರಚಲಿತ ರಾಜಕೀಯ ವಿದ್ಯಮಾನಗಳು, ಪಕ್ಷದ ಸಂಘಟನೆ ಬಗ್ಗೆ ಗಂಭೀರ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಶಾಸಕರ ಅಭಿಪ್ರಾಯ ಪಡೆದು ಸರ್ಕಾರವನ್ನು ಮುನ್ನಡೆಸುವ ಹಾಗೂ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಬಗ್ಗೆ ಕಾರ್ಯತಂತ್ರ ರೂಪಿಸುವ ಕುರಿತಂತೆ ಚರ್ಚೆ ನಡೆಸಲಾಗುತ್ತದೆ. ಕಳೆದ ಒಂದು ವರ್ಷದಿಂದಲೂ ಆಪರೇಷನ್ ಕಮಲದ ಪ್ರಯತ್ನ ನಡೆಯುತ್ತಿದ್ದು, ಯಾವುದಕ್ಕೂ ಪಕ್ಷದ ಶಾಸಕರು ಅವಕಾಶ ನೀಡದೆ ಒಗ್ಗಟ್ಟು ಕಾಯ್ದುಕೊಂಡು ಬಂದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅದೇ ರೀತಿ ಇನ್ನು ಮುಂದೆಯೂ ಶಾಸಕರು ಒಗ್ಗಟ್ಟಿನಿಂದ ಸರ್ಕಾರ ಮತ್ತು ಪಕ್ಷಕ್ಕೆ ಸಹಕಾರ ನೀಡುವಂತೆ ಕೋರುವ ಸಾಧ್ಯತೆಗಳಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ