ಬೆಂಗಳೂರು, ಜೂ.5- ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕ ಎಚ್.ವಿಶ್ವನಾಥ್ ಅವರನ್ನು ಒಕ್ಕೊರಲಿನಿಂದ ಒತ್ತಾಯಿಸಿದ್ದು, ಅವರು ಒಂದು ದಿನದ ಕಾಲಾವಕಾಶವನ್ನು ಕೋರಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮನೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಶ್ವನಾಥ್ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆ ಸಂದರ್ಭದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸೇರಿದಂತೆ ಎಲ್ಲರೂ ರಾಜೀನಾಮೆಯನ್ನು ವಾಪಸ್ಸು ಪಡೆದು ರಾಜ್ಯಾಧ್ಯಕ್ಷರಾಗಿ ಮುಂದುವರೆಯಬೇಕೆಂದು ಪಟ್ಟು ಹಿಡಿದಿದ್ದಾರೆ.
ಶಾಸಕರ ಒತ್ತಾಯಕ್ಕೆ ಮಣಿದ ವಿಶ್ವನಾಥ್ ಅವರು, ಒಂದು ದಿನ ಕಾಲಾವಕಾಶ ಕೋರಿದ್ದು, ದೇವೇಗೌಡರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ವಿಶ್ವನಾಥ್ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಗೌಡರು ಭಾವುಕರಾಗಿ ವಿಶ್ವನಾಥ್ ಅವರ ಕೈ ಹಿಡಿದು ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವಂತೆ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.
ಆ ಸಂದರ್ಭದಲ್ಲಿ ವಿಶ್ವನಾಥ್ ಅವರು ತಮಗೆ ರಾಜಕೀಯ ಪುನರಜನ್ಮ ನೀಡುರುವ ಜೆಡಿಎಸ್ ಪಕ್ಷವನ್ನು ಬಿಡುವುದಿಲ್ಲ. ತಾವು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಇದಕ್ಕೆ ಯಾರೂ ಕೂಡ ಸಮ್ಮತಿಸದೆ ರಾಜ್ಯಾಧ್ಯಕ್ಷ ಸ್ಥಾನದಲ್ಲೇ ಮುಂದುವರೆಯಬೇಕೆಂಬ ತೀವ್ರ ಒತ್ತಾಸೆಯನ್ನು ಮಾಡಿದ್ದಾರೆ.
ಶಾಸಕರೆಲ್ಲರೂ ನಿಮ್ಮ ಮಾರ್ಗದರ್ಶನದ ಅಗತ್ಯ ನಮಗೆ ಮತ್ತು ಪಕ್ಷಕ್ಕಿದೆ. ನಿಮಗೇನಾದರೂ ನೋವಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳೋಣ, ಪಕ್ಷ ಸಂಘಟನೆ ಸೇರಿದಂತೆ ಎಲ್ಲಾ ವಿಚಾರದಲ್ಲೂ ನಿಮ್ಮ ಸಲಹೆ, ಸಹಕಾರ ಬೇಕಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನದಲ್ಲೇ ಮುಂದುವರೆಯಬೇಕೆಂದು ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರವನ್ನು ಸುಭದ್ರಗೊಳಿಸಲು ನಮ್ಮ ಪಕ್ಷದ ಪಾಲಿನ ಸಚಿವ ಸ್ಥಾನವನ್ನು ಬಿಟ್ಟುಕೊಡಬೇಕಾಗುತ್ತದೆ ಎಂಬ ಪ್ರಸ್ತಾಪ ಮಾಡಿದ್ದು, ಆ ಸಂದರ್ಭದಲ್ಲಿ ಪಕ್ಷೇತರ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಜೆಡಿಎಸ್ ಶಾಸಕರು ಸಮ್ಮತ್ತಿಸಿದ್ದಾರೆ. ಪಕ್ಷ ಸಂಘಟನೆ ಬಗ್ಗೆ ಪ್ರತಿಯೊಬ್ಬರೂ ಆದ್ಯತೆ ನೀಡಿ ಸದಸ್ಯತ್ವ ನೋಂದಣಿ ಮಾಡಬೇಕು. ಪ್ರಾದೇಶಿಕ ಪಕ್ಷವನ್ನು ಗಟ್ಟಿಗೊಳಿಸಬೇಕು ಎಂದು ನಾಯಕರು ನಿರ್ದೇಶನ ನೀಡಿದ್ದಾರೆ.
ಮೈತ್ರಿ ಸರ್ಕಾರದ ಸಾಲ ಮನ್ನಾ ಸೇರಿದಂತೆ ಜನಪ್ರಿಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು. ಆ ಮೂಲಕ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವ ಪ್ರಯತ್ನ ಮಾಡಬೇಕೆಂಬ ಸಲಹೆ ಮಾಡಿದ್ದು, ಅದಕ್ಕೆಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಯುವ ಜನತಾದಳದ ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಪ್ರಸ್ತಾಪ ವ್ಯಕ್ತವಾಯಿತಾದರೂ, ಯಾವುದೇ ನಿರ್ಧಾರವನ್ನು ಕೈಗೊಳ್ಳಲಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.