ಹೈಕಮಾಂಡ್ ರಾಜ್ಯದ ಹಿರಿಯ ನಾಯಕರ ಸಭೆ ಕರೆಯಬೇಕು-ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಜೂ.5-ಮಾಜಿ ಸಚಿವ ರಾಮಲಿಂಗಾರೆಡ್ಡಿ, ಸಚಿವ ರೋಷನ್ ಬೇಗ್ ಅವರ ಅಸಮಾಧಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯದ ಹಿರಿಯ ನಾಯಕರ ಸಭೆ ಕರೆಯಬೇಕು ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರು ಅಸಮಾಧಾನ ಹೊರಹಾಕುತ್ತಿರುವ ಸಂದರ್ಭದಲ್ಲಿ ತಕ್ಷಣ ಹೈಕಮಾಂಡ್ ಮಧ್ಯಪ್ರವೇಶಿಸಿ ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಬೇಕು. ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಐಸಿಸಿ ಅಧ್ಯಕ್ಷರಾದ ರಾಹುಲ್‍ಗಾಂಧಿಯವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಮಾಲೋಚನೆ ನಡೆಸಿ ತಿಳಿಗೊಳಿಸಬೇಕಿದೆ. ಎಲ್ಲರೂ ಸೇರಿ ಪಕ್ಷವನ್ನು ಸದೃಢಗೊಳಿಸಬೇಕಾದ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು.

ಜಿಂದಾಲ್ ಕಂಪನಿ ಸರ್ಕಾರಕ್ಕೆ ಬಾಕಿ ಹಣ ನೀಡಬೇಕಾಗಿರುವುದರ ಬಗ್ಗೆ ದಾಖಲೆ ಸಹಿತ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಪತ್ರ ಬರೆದಿರುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರು ಜಿಂದಾಲ್ ಕಂಪನಿಯಿಂದ ಸರ್ಕಾರಕ್ಕೆ ಯಾವುದೇ ಬಾಕಿ ಬರಬೇಕಿಲ್ಲ ಎಂದು ಹೇಳಿದ್ದಾರೆ. ಆದರೆ ಆ ಕಂಪನಿ ಸರ್ಕಾರಕ್ಕೆ ನೀಡಬೇಕಾದ ಹಣ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದರು.

ಜಮೀನನ್ನು ನೀಡುವ ಮೊದಲು ಎಚ್ಚರಿಕೆ ವಹಿಸುವ ಬಗ್ಗೆ ಪ್ರಸ್ತಾಪಿಸಿದ್ದೆ. ಅಲ್ಲದೆ ಜಿಂದಾಲ್ ಪ್ರಕರಣ ನ್ಯಾಯಾಲಯದಲ್ಲಿರುವ ಸಂದರ್ಭದಲ್ಲೂ ನಿರ್ಣಯ ಕೈಗೊಳ್ಳಲಾಗಿದೆ. ಕಾನೂನು ಇಲಾಖೆಯ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ಜಿಂದಾಲ್ ಸಂಸ್ಥೆಗೆ ಜಮೀನು ನೀಡುವ ನಿರ್ಣಯವನ್ನು ಸರ್ಕಾರ ಈಗಲಾದರೂ ವಾಪಸ್ ಪಡೆಯಬೇಕೆಂದು ಅವರು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ