ಜೆಡಿಎಸ್‍ನಿಂದ ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತರಾಗಿರುವ ಪಕ್ಷದ ಅಭ್ಯರ್ಥಿಗಳಿಗೆ ಸನ್ಮಾನ

ಬೆಂಗಳೂರು,ಜೂ.6-ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಪಕ್ಷ ಸಂಘಟನೆಗೆ ಆದ್ಯತೆ ನೀಡಿರುವ ಜೆಡಿಎಸ್, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತರಾಗಿರುವ ಪಕ್ಷದ ಅಭ್ಯರ್ಥಿಗಳಿಗೆ ಸನ್ಮಾನ ಮಾಡಲಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಗರದ ಅರಮನೆ ಮೈದಾನದ ಶೀಷ ಮಹಲ್‍ನಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಭಾರೀ ಹಿನ್ನಡೆ ಉಂಟಾಗಿದ್ದರೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಸ್ವಲ್ಪ ಮಟ್ಟಿಗೆ ಚೇತರಿಸಿಕೊಂಡಿದೆ. ಹೀಗಾಗಿ ತಳಮಟ್ಟದಿಂದಲ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವರು, ಲೋಕಸಭೆಯ ರಾಜ್ಯಸಭಾ ಸದಸ್ಯರು, ವಿಧಾನಸಭೆ, ವಿಧಾನಪರಿಷತ್‍ನ ಸದಸ್ಯರು, ಪಕ್ಷದ ಮುಖಂಡರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳಿಗೆ ಸಭೆಯಲ್ಲಿ ಪಾಲ್ಗೊಲ್ಳುವಂತೆ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಪ್ರಕಟನೆಯಲ್ಲಿ ಕೋರಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ನಡೆಯುತ್ತಿರುವ ಪಕ್ಷದ ಮೊದಲ ಕಾರ್ಯಕ್ರಮ ಇದಾಗಿದ್ದು, ಮೈತ್ರಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಸ್ಥಳೀಯವಾಗಿ ಸದಸ್ಯತ್ವ ನೋಂದಣಿ ಮಾಡುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ