ಎಚ್.ವಿಶ್ವನಾಥ್‍ರವರನ್ನು ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆ ಮುಂದುವರೆದ ಮನವೊಲಿಸುವ ಪ್ರಯತ್ನ

ಬೆಂಗಳೂರು,ಜೂ.6- ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಎಚ್.ವಿಶ್ವನಾಥ್ ಅವರ ಮನವೊಲಿಸುವ ಪ್ರಯತ್ನ ಮುಂದುವರೆದಿದೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ನೀಡಿರುವ ರಾಜೀನಾಮೆ ಅಂಗೀಕಾರವೂ ಆಗಿಲ್ಲ. ಇಲ್ಲವೇ ವಾಪಸ್ ಪಡೆದಿಲ್ಲ. ಮೂರು ದಿನ ಕಳೆದರೂ ಈ ವಿಚಾರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ವಿಶ್ವನಾಥ್ ಕೂಡ ತಮ್ಮ ನಿಲುವಿಗೆ ಅಂಟಿಕೊಂಡಿರುವುದರಿಂದ ಜೆಡಿಎಸ್ ವರಿಷ್ಠರು ಮತ್ತೊಮ್ಮೆ ಅವರನ್ನು ಭಾವನಾತ್ಮಕವಾಗಿ ಮನವೊಲಿಸುವ ಪ್ರಯತ್ನ ನಡೆಸಲಿದ್ದಾರೆ.

ಮಂಗಳವಾರ ರಾತ್ರಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎಲ್ಲ ಶಾಸಕರು ರಾಜೀನಾಮೆಯನ್ನು ಹಿಂಪಡೆದು ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವಂತೆ ವಿಶ್ವನಾಥ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮನವಿಗೆ ಮಣಿಯದೆ ತಮ್ಮ ನಿಲುವಿಗೆ ಅಂಟಿಕೊಂಡಿದ್ದ ವಿಶ್ವನಾಥ್ ಅವರು ಕಾಲಾವಕಾಶವನ್ನು ಕೋರಿದ್ದಾರೆ ಎನ್ನಲಾಗಿದೆ.

ನಾಳೆ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ಜೆಡಿಎಸ್ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆ ಕಾರ್ಯಕ್ರಮದಲ್ಲೂ ವಿಶ್ವನಾಥ್ ತಮ್ಮ ನಿಲುವನ್ನು ಬದಲಿಸಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆ ಓಲೈಸುವ ಸಾಧ್ಯತೆಗಳಿವೆ.

ಅಲ್ಲದೆ ನಾಳೆ ಜೆಡಿಎಸ್ ಪಕ್ಷದ ಹಿರಿಯ ನಾಯಕರು ವಿಶ್ವನಾಥ್ ಅವರೊಂದಿಗೆ ಮತ್ತೊಮ್ಮೆ ಸಮಾಲೋಚನೆ ನಡೆಸಿ ಸಂದಿಗ್ಧ ರಾಜಕೀಯ ಪರಿಸ್ಥಿತಿಯಲ್ಲಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆ ಮನವೊಲಿಸುವ ಪ್ರಯತ್ನ ನಡೆಸಲಿದ್ದಾರೆ.

ಪಕ್ಷ ಸಂಘಟನೆಗೆ ನಿಮ್ಮ ಮಾರ್ಗದರ್ಶನ ಅಗತ್ಯವಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಪತ್ರವನ್ನು ವಾಪಸ್ ಪಡೆದು ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆ ಕೋರುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಪಕ್ಷದಿಂದ ನೀಡಿದ ಕಾರನ್ನೂ ಸಹ ವಾಪಸ್ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ