ಬೆಂಗಳೂರು, ಜೂ.9- ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಬಿಜೆಪಿ ಎದುರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.
ಕ್ಷೇತ್ರದ ತಾವರೆಕೆರೆ ಗ್ರಾಮದೇವತೆ ಮಾರಮ್ಮ ದೇವಿಗೆ ಹರಕೆ ಒಪ್ಪಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಗೆಲುವಿಗೆ ಸಹಕರಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣೆ ಭಾರೀ ಪೈಪೋಟಿಯಿಂದ ಕೂಡಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ನ ಏಳು ಮಂದಿ ಘಟಾನುಗಟಿ ಶಾಸಕರ ನಡುವೆಯೂ ಕೇವಲ ಒಬ್ಬ ಬಿಜೆಪಿ ಶಾಸಕ ಹಾಗೂ ವಿಧಾನ ಪರಿಷತ್ ಸದಸ್ಯರೊಬ್ಬರ ನಡುವೆ ಯುದ್ಧದಂತೆ ನಡೆದ ಚುನಾವಣೆಯಲ್ಲಿ ಗೆಲ್ಲಿಸಿದ ಮತದಾರರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಶಕ್ತಿ ಮೀರಿ ಸೇವೆ ಸಲ್ಲಿಸುತ್ತೇನೆ ಎಂದು ಭರವಸೆ ನೀಡಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಜಂಟಿ ಕಾರ್ಯಾಚರಣೆ ನಡೆಸಿದರು ನಿರೀಕ್ಷೆಗೂ ಮೀರಿ ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಅದರಲ್ಲೂ ಜೆಡಿಎಸ್ ಕಾರ್ಯಕರ್ತರು ಹಾಗೂ ಸ್ಥಳೀಯ ನಾಯಕರು ಬಿಜೆಪಿಗೆ ದೊಡ್ಡ ಪ್ರಮಾಣದಲ್ಲಿ ಆಶೀರ್ವದಿಸಿದ್ದಾರೆ. ಸಚ್ಚಾರಿತ್ರ್ಯ ಹಾಗೂ ವಿಶ್ವಾಸಾರ್ಹ ರಾಜಕಾರಣಿಗಳು ಗೆಲ್ಲಬೇಕು ಸಾರ್ವಜನಿಕ ವ್ಯವಸ್ಥೆಯಲ್ಲಿ ರಾಜಕಾರಣ ಕೊಳ್ಳೆ ಹೊಡೆಯುವ ಅಖಾಡವಾಗಬಾರದೆಂಬ ಸದುದ್ದೇಶದಿಂದ ಜೆಡಿಎಸ್ ನವರು ನನ್ನನ್ನು ಬೆಂಬಲಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಸದ್ಯದಲ್ಲೇ ಮಾಗಡಿ ಮುಖ್ಯರಸ್ತೆಯ ಅಗಲೀಕರಣ ಕಾರ್ಯ ನಡೆಯಲಿದ್ದು, ಗ್ರಾಮಸ್ಥರ ಬೇಡಿಕೆಯಂತೆ ತಾವರೆಕೆರೆ ಗ್ರಾಮಕ್ಕೆ ಧಕ್ಕೆಯಾಗದಂತೆ ಕಂಬಗಳ ಮೇಲೆ ಮೇಲು ರಸ್ತೆಯನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ಮನವಿ ಮಾಡಿದರು.
ತಾವರೆಕೆರೆ, ಚೆನ್ನೆನಹಳ್ಳಿ ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಒಗ್ಗೂಡಿಸಿ ಪುರಸಭೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಕಾರ್ಯಗತವಾದರೆ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ. ಈ ಸಂಬಂಧ ಸಹಕಾರ ನೀಡಬೇಕೆಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರನ್ನು ಕೋರಿಕೊಂಡರು.
ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಕ್ಷೇತ್ರ ಬಿಜೆಪಿ ಅಧ್ಯಕ್ಷ ಮಾರೇಗೌಡ, ಬಿಬಿಎಂಪಿ ಮಾಜಿ ಸದಸ್ಯ ರಾ.ಆಂಜನಪ್ಪ ತಾವರೆಕೆರೆ ಶಕ್ತಿ ಕೇಂದ್ರದ ಅಧ್ಯಕ್ಷ ರಮೇಶ್, ಕ್ಷೇತ್ರ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಯತೀಶ್, ಮುಖಂಡರಾದ ನವೀನ್, ರಮೇಶ್, ದೇವರಾಜ ಹಾಗೂ ಗ್ರಾಮಸ್ಥರು ಹಾಜರಿದ್ದರು.