ಬೆಂಗಳೂರು,ಜೂ.09-ಜೂ.21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಚಂಡರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡುವ ಸಾಧ್ಯತೆಗಳಿದ್ದು, ಜೂ.22ರಂದು ಕಲಬುರಗಿ ಜಿಲ್ಲೆಯ ಅಫ್ಜಲ್ಪುರ ತಾಲ್ಲೂಕಿನ ಹೆರೂರಿನಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ಹೆರೂರ್ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯಕ್ಕೆ ಕೈಗೊಳ್ಳಬೇಕಾದ ಅಗತ್ಯ ಕ್ರಮ ಹಾಗೂ ಭದ್ರತೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಶಾಸಕರಾದ ಎಂ.ವೈ.ಪಾಟೀಲ್, ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್, ಜಿಲ್ಲಾ ಎಸ್ಪಿ ಮಾರ್ಟಿನ್ ಮಾರ್ಬನ್ಯಾಂಗ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್, ಕಲ್ಬುರ್ಗಿ ಜಿಲ್ಲೆಯ ಅಫ್ಜಲ್ಪುರ, ರಾಯಚೂರು ಜಿಲ್ಲೆಯ ಸಿಂಧನೂರು ಹಾಗೂ ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲ್ಲೂಕುಗಳಲ್ಲಿ ಗ್ರಾಮವಾಸ್ತವ್ಯ ಹೂಡಲು ಉದ್ದೇಶಿಸಿದ್ದಾರೆ.