ಬೆಂಗಳೂರು, ಜೂ.11- ನಗರದ ಆಸ್ತಿ ಮಾಲೀಕರಿಗೆ ಬಿಬಿಎಂಪಿ ತಾತ್ಕಾಲಿಕ ರಿಲೀಫ್ ನೀಡಿದೆ.
ಮನೆಗಳಿಗೆ ಶೇ.25, ವಾಣಿಜ್ಯ ಕಟ್ಟಡಗಳಿಗೆ ಶೇ.30ರಷ್ಟು ತೆರಿಗೆ ಹೆಚ್ಚಳ ಮಾಡಲು ಬಿಬಿಎಂಪಿ ನಿರ್ಧರಿಸಿತ್ತು.
ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿತ್ತು.ಆದರೆ, ಪ್ರಸಕ್ತ ಆರ್ಥಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರಿಗೆ ಹೊರೆಯಾಗುವುದನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಸದ್ಯಕ್ಕೆ ತೆರಿಗೆ ಹೆಚ್ಚಳ ಮಾಡದಿರಲು ನಿರ್ಧರಿಸಲಾಗಿದೆ.
ಈಗಾಗಲೇ ಶೇ.50ರಷ್ಟು ಜನರು ತೆರಿಗೆ ಪಾವತಿಸಿದ್ದಾರೆ.ಈಗ ಮಧ್ಯಂತರ ತೆರಿಗೆ ಹೆಚ್ಚಳ ಮಾಡಿದರೆ ಜನರ ವಿರೋಧ ಎದುರಿಸಬೇಕಾಗುತ್ತದೆ ಎಂಬ ಕಾರಣದಿಂದ ತೆರಿಗೆ ಹೆಚ್ಚಳ ಪ್ರಸ್ತಾಪವನ್ನು ಬಿಬಿಎಂಪಿ ಆಡಳಿತ ಪಕ್ಷ ಕೈಬಿಟ್ಟಿದ್ದು, 2020ನೆ ವರ್ಷಕ್ಕೆ ತೆರಿಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಜೂ.5ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಆಯುಕ್ತ ಮಂಜುನಾಥ್ ಪ್ರಸಾದ್ ಕಳೆದ ಮೂರು ವರ್ಷಗಳಿಂದ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಲಾಗಿಲ್ಲ. ಕೆಎಂಸಿ ಕಾಯ್ದೆ ಪ್ರಕಾರ ಪ್ರತಿ ಮೂರು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಣೆ ಮಾಡುವುದು ಮಾಮೂಲು. ಅನಿವಾರ್ಯ ಕಾರಣಗಳಿಂದ ಈ ಸಾಲಿನಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವುದು ಅನಿವಾರ್ಯ ಎಂದು ತೆರಿಗೆ ಹೆಚ್ಚಳದ ಸುಳಿವು ನೀಡಿದ್ದರು.
ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್ ಕೂಡ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಆಸ್ತಿ ತೆರಿಗೆ ಹೆಚ್ಚಳ ಮಾಡುವ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಮರ್ಥಿಸಿಕೊಂಡಿದ್ದರು.ಆದರೆ, ಬಿಜೆಪಿ ಸದಸ್ಯರು ಆಸ್ತಿ ತೆರಿಗೆ ಹೆಚ್ಚಳಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.ಒಂದು ವೇಳೆ ತೆರಿಗೆ ಹೆಚ್ಚಳ ಮಾಡಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಕೂಡ ಎಚ್ಚರಿಸಿದ್ದರು.
ಒಟ್ಟಾರೆ ಈಗ ಅರ್ಧದಲ್ಲಿ ತೆರಿಗೆ ಹೆಚ್ಚಳ ಮಾಡಿ ಸಾರ್ವಜನಿಕರ ವಿರೋಧ ಕಟ್ಟಿಕೊಳ್ಳುವುದು ಬೇಡ ಎಂಬ ಕಾರಣಕ್ಕೆ ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ವಿಚಾರವನ್ನು ಕೈ ಬಿಟ್ಟಿದೆ.
ತೆರಿಗೆ ಏರಿಸಿದರೆ ಈಗಾಗಲೇ ಸಾಕಷ್ಟು ಮಂದಿ ತೆರಿಗೆ ಕಟ್ಟಿರುವುದರಿಂದ ಹೆಚ್ಚುವರಿ ತೆರಿಗೆಯನ್ನು ಸಂಗ್ರಹಿಸುವುದು ಕಷ್ಟವಾಗುತ್ತದೆ. ಅದಕ್ಕಾಗಿ ಸದ್ಯ ತೆರಿಗೆ ಹೆಚ್ಚಳವನ್ನು ಮಾಡುತ್ತಿಲ್ಲ ಎಂದು ಮೇಯರ್ ಗಂಗಾಂಬಿಕೆ ಸುದ್ದಿಗಾರರಿಗೆ ಸ್ಪಷ್ಟಪಡಿಸಿದ್ದಾರೆ.