ನಾಳೆ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು,ಜೂ.13- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯಲಿದ್ದು, ಪಕ್ಷೇತರ ಶಾಸಕರಿಬ್ಬರು ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಮತ್ತೊಂದು ಸಚಿವ ಸ್ಥಾನ ಯಾರಿಗೆ ದೊರೆಯಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ ಮಧ್ಯಾಹ್ನ 1 ಗಂಟೆಗೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಬೋಧಿಸಲಿದ್ದಾರೆ.

ಪಕ್ಷೇತರ ಶಾಸಕರಾದ ಶಂಕರ್ ಹಾಗೂ ನಾಗೇಶ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪ್ರಸ್ತುತ ಮೂರು ಸಚಿವ ಸ್ಥಾನಗಳು ಖಾಲಿ ಉಳಿದಿವೆ. ಎರಡು ಜೆಡಿಎಸ್ ಪಾಲಿನ ಸಚಿವ ಸ್ಥಾನಗಳಾದರೆ, ಒಂದು ಕಾಂಗ್ರೆಸ್‍ನ ಪಾಲಿನದಾಗಿದೆ.

ಆಡಳಿತ ಪಕ್ಷಗಳು ತಲಾ ಒಂದು ಸಚಿವ ಸ್ಥಾನವನ್ನು ಪಕ್ಷೇತರ ಶಾಸಕರಿಗೆ ನೀಡಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್‍ನ ಇನ್ನೊಂದು ಸ್ಥಾನ ಯಾರಿಗೆ ನೀಡಲಾಗುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸಿದ್ದು, ಪಕ್ಷದ ವರಿಷ್ಠರು ಇನ್ನೂ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ.

ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಖ್ ಅವರ ಹೆಸರು ಮುಂಚೂಣಿಯಲ್ಲಿದೆ. ಅಲ್ಲದೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಎಚ್.ವಿಶ್ವನಾಥ್ ಅವರ ಹೆಸರು ಕೂಡ ಪ್ರಸ್ತಾಪವಾಗುತ್ತಿದ್ದು, ಕೊನೆ ಗಳಿಗೆಯಲ್ಲಿ ಜೆಡಿಎಸ್ ಯಾರಿಗೆ ಸಚಿವ ಸ್ಥಾನವನ್ನು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಅವರ ಹೆಸರು ಕೂಡ ಪ್ರಸ್ತಾಪವಾಗಿದ್ದು, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅವರು ಕೂಡ ಮಂತ್ರಿಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಜೆಡಿಎಸ್ ಕೋಟಾದ ಎರಡು ಸಚಿವ ಸ್ಥಾನಗಳನ್ನು ಪಕ್ಷೇತರರಿಗೆ ನೀಡಿದರೆ ಕಾಂಗ್ರೆಸ್ ಕೋಟಾದ ಒಂದು ಸ್ಥಾನವನ್ನು ಕಾಂಗ್ರೆಸ್ ಶಾಸಕರಿಗೆ ನೀಡುವ ಸಾಧ್ಯತೆ ಇತ್ತು.

ಆದರೆ ಜೆಡಿಎಸ್ ಇಬ್ಬರು ಪಕ್ಷೇತರ ಶಾಸಕರ ಪೈಕಿ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲು ನಿರ್ಧರಿಸಿರುವುದರಿಂದ ಕಾಂಗ್ರೆಸ್ ಶಾಸಕರಿಗೆ ಅವಕಾಶ ದೊರೆಯುವ ಸಾಧ್ಯತೆಗಳಿಲ್ಲ.

ಆಡಳಿತ ಪಕ್ಷದ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗದಂತೆ ತಡೆಯುವುದು ಹಾಗೂ ಮೈತ್ರಿ ಸರ್ಕಾರವನ್ನು ಸುಭದ್ರಗೊಳಿಸಿ ಆಡಳಿತ ನಡೆಸಬೇಕೆಂಬ ಉದ್ದೇಶವನ್ನು ಕಾಂಗ್ರೆಸ್-ಜೆಡಿಎಸ್ ನಾಯಕರು ಹೊಂದಿದ್ದಾರೆ.

ಈ ಉದ್ದೇಶ ಈಡೇರಲು ಮೈತ್ರಿ ಪಕ್ಷಗಳ ನಡುವೆ ಸ್ವಲ್ಪ ವ್ಯತ್ಯಾಸವಾದರೂ ಅನುಸರಿಸಿಕೊಂಡು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯುವ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ