ಬೆಂಗಳೂರು, ಜೂ.14-ಭೂಗಳ್ಳರಿಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳನ್ನು ಜೈಲಿಗೆ ಹಾಕಿ…
ಹೀಗೆಂದು ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿ ಸದಸ್ಯರು, ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್. ದೊರೆಸ್ವಾಮಿಯವರ ನೇತೃತ್ವದಲ್ಲಿ ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಘೋಷಣೆ ಕೂಗಿ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ದೊರೆಸ್ವಾಮಿಯವರು, ಬಿಬಿಎಂಪಿ, ಜಿಲ್ಲಾಡಳಿತ ಮತ್ತು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇತ್ತೀಚೆಗೆ ನಾನು ಒತ್ತುವರಿಯಾಗಿರುವ ಕೆರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇ. ಒತ್ತುವರಿಯಾಗಿರುವ ಕೆರೆ ಭಾಗವನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಿದ್ದೆ. ಆದರೆ ಭರವಸೆ ನೀಡಿದ್ದ ಅಧಿಕಾರಿಗಳು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗುಡುಗಿದರು.
ನಿಮಗೆ ನಾಚಿಕೆ, ಮಾನ, ಮರ್ಯಾದೆ ಇದ್ದರೆ ತಕ್ಷಣವೇ ಒತ್ತುವರಿ ತೆರವು ಮಾಡಿ.ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕಠಿಣ ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಆಯುಕ್ತ ಮಂಜುನಾಥ್ ಪ್ರಸಾದ್ ಆಗಮಿಸದೆ. ವಿಶೇಷ ಆಯುಕ್ತ ಮನೋಜ್ಕುಮಾರ್ ಮೀನಾ ಅವರನ್ನು ಕಳುಹಿಸಿದ್ದರು. ಇದರಿಂದ ಮತ್ತಷ್ಟು ರೊಚ್ಚಿಗೆದ್ದ ಪ್ರತಿಭಟನಾಕಾರರು ಸ್ಥಳಕ್ಕೆ ಆಯುಕ್ತರು ಬರಲೇಬೇಕು ಎಂದು ಪಟ್ಟು ಹಿಡಿದರು.
ಮಳೆಗಾಲ ಪ್ರಾರಂಭವಾದರೂ ರಾಜಕಾಲುವೆಗಳು ಮತ್ತು ಕೆರೆಗಳ ಒತ್ತುವರಿ ತೆರವು ಮಾಡಿಲ್ಲ, ನಟ ದರ್ಶನ್ ಮನೆ ಹಾಗೂ ಶಾಮನೂರು ಶಿವಶಂಕರಪ್ಪ ಆಸ್ಪತ್ರೆ ಸೇರಿದಂತೆ ಹಲವು ಕಡೆ ಒತ್ತುವರಿಯಾಗಿರುವುದು ಹಾಗೆಯೇ ಉಳಿದಿದೆ. ಕೆಲವೆಡೆ ಒತ್ತುವರಿ ತೆರವು ಪ್ರಾರಂಭಿಸಿದ್ದರು. ಅರ್ಧಕ್ಕೆ ನಿಲ್ಲಿಸಲಾಗಿದೆ.ಕೂಡಲೇ ನ್ಯಾಯಾಲಯದಲ್ಲಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಯಾರೇ ಎಷ್ಟೇ ಪ್ರಭಾವಿಗಳಾಗಿರಲಿ, ಯಾವುದೇ ಒತ್ತಡಕ್ಕೆ ಮಣಿಯದೆ ನಿರ್ದಾಕ್ಷಿಣ್ಯವಾಗಿ ಒತ್ತುವರಿ ತೆರವು ಮಾಡಬೇಕೆಂದು ಆಗ್ರಹಿಸಿದರು.
ನಗರದಲ್ಲಿ ಅನೇಕ ಕೆರೆ ಮತ್ತು ಸರ್ಕಾರಿ ಜಮೀನು ಒತ್ತುವರಿಯಾಗಿದೆ. ಆದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಪಾಲಿಕೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ವಿವಿಧ ಸಂಘ ಸಂಸ್ಥೆಗಳೊಂದಿಗೆ ಸೇರಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ವಿವಿಧ ಕನ್ನಡ ಪರ ಸಂಘಟನೆಗಳು, ಹೋರಾಟಗಾರರು, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಶಿವರಾಮೇಗೌಡ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.