ಬೆಂಗಳೂರು, ಜೂ.16-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯಿಂದಾಗಿ ಬಾದಾಮಿ ಕ್ಷೇತ್ರ ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿದೆ ಎಂಬ ಆರೋಪಕ್ಕೆ ಟ್ವಿಟರ್ ಮೂಲಕ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು ಕ್ಷೇತ್ರದಲ್ಲಿ 1300ಕೋಟಿಗೂ ಹೆಚ್ಚಿನ ಮೊತ್ತದ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕೆಲವರು ಸಿದ್ದರಾಮಯ್ಯ ಅವರನ್ನು ಟೀಕಿಸಿ ಟ್ವಿಟ್ ಮಾಡಿದ್ದರು. ಇದಕ್ಕೆ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸಮಗ್ರ ವಿವರಗಳನ್ನು ದಾಖಲಿಸಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ವಿಧಾನಸಭೆ ಚುನಾವಣೆಯಲ್ಲಿ ನಾನು ಬಾದಾಮಿ ಕ್ಷೇತ್ರದಿಂದ ಆಯ್ಕೆಯಾದ ಬಳಿಕ ಈವರೆಗೂ ಸುಮಾರು 50ಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದೇನೆ. ಜನರ ಕುಂದುಕೊರತೆಗಳನ್ನು ಆಲಿಸಿದ್ದೇನೆ. ಜನರ ಜತೆ ನಿರಂತರ ಸಂಪರ್ಕ ಕಾಯ್ದುಕೊಳ್ಳಲು ಬಾದಾಮಿಯಲ್ಲಿ ಗೃಹ ಕಚೇರಿಯನ್ನೂ ತೆರೆದಿದ್ದೇನೆ ಎಂದು ಹೇಳಿದ್ದಾರೆ.
ಸಾಧನೆ ಬಗ್ಗೆ ತುತ್ತೂರಿ ಊದುವುದು ನನ್ನ ಜಾಯಮಾನವಲ್ಲ. ಶಾಸಕನಾಗಿ ನಾನು ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಇದು ಕ್ಷೇತ್ರದ ಮತದಾರರಿಗೂ ತಿಳಿದಿದೆ. ಈ ಬಗ್ಗೆ ರಾಜಕೀಯ ವಾಗ್ವಾದ ಮಾಡುವುದರಲ್ಲಿ ನನಗೆ ಆಸಕ್ತಿ ಇಲ್ಲ ಎಂದು ಅವರು ತಿಳಿಸಿದ್ದಾರೆ.
ನೀರಾವರಿ, ರಸ್ತೆ, ಪ್ರವಾಸೋದ್ಯ, ಮೂಲಸೌಲಭ್ಯ ಅಭಿವೃದ್ಧಿ ಈ ಒಂದು ವರ್ಷದಲ್ಲಿ 1300 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವುದಾಗಿ ಹೇಳಿದ್ದಾರೆ.