
ಬೆಂಗಳೂರು, ಜೂ.18- ಅಂತರ್ಜಲ ವೃದ್ಧಿಗಾಗಿ ಜಿಲ್ಲೆಯಾದ್ಯಂತ ಹೆಚ್ಚು ಚೆಕ್‍ಡ್ಯಾಂ ಮತ್ತು ಇಂಗು ಗುಂಡಿಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ನೀರಿನ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಬೇಕೆಂದು ವಸತಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ) ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಬರ ಪರಿಶೀಲನೆ ಅಧ್ಯಯನ ಹಾಗೂ ಜಿಲ್ಲೆಯ ಆಡಳಿತ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ 89 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಿದ್ದು, 50 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ಹಾಗೂ 39 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಕಾರ್ಯಪಾಲಕ ಅಭಿಯಂತರ ಸತ್ಯನಾರಾಯಣ ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೊಳವೆ ಬಾವಿ ಕೊರೆಯುವುದರಿಂದ ನೀರಿನ ಸಮಸ್ಯೆ ಬಗೆಹರಿಯುವುದಿಲ್ಲ, ದಿನದಿಂದ ದಿನಕ್ಕೆ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಇದಕ್ಕೆ ಪರ್ಯಾಯ ಕ್ರಮಗಳನ್ನು ಅನುಸರಿಸಬೇಕು. ಅಂತರ್ಜಲ ಅಭಿವೃದ್ಧಿಗಾಗಿ ಕೆರೆಕುಂಟೆಗಳ ಪುನರುಜ್ಜೀವನ, ಚೆಕ್ ಡ್ಯಾಂ, ಇಂಗು ಗುಂಡಿಗಳ ನಿರ್ಮಾಣ ಕಾಮಗಾರಿಗಳನ್ನು ಹೆಚ್ಚು ಕೈಗೊಳ್ಳಬೇಕೆಂದರು.
ಜಿಲ್ಲೆಯಲ್ಲಿ ಕೆಆರ್‍ಡಿಎಲ್ ಸಂಸ್ಥೆ ವತಿಯಿಂದ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಬಹುತೇಕ ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ. ದುರಸ್ತಿ ಕಾರ್ಯ ಕೈಗೊಂಡರೂ ಪದೇ ಪದೇ ಸ್ಥಗಿತಗೊಳ್ಳುತ್ತಿವೆ. ಈ ಕಾಮಗಾರಿಗಳನ್ನು ನಡೆಸಿದ ಏಜೆನ್ಸಿ ಹಾಗೂ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಬೇಕೆಂದು ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ಕೃಷಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರು, ಕೃಷಿಯಂತ್ರಧಾರೆ ಯೋಜನೆಯಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅವಶ್ಯವಿರುವ ಕೃಷಿಯಂತ್ರೋಪಕರಣಗಳು ರೈತರಿಗೆ ಸರಿಯಾಗಿ ದೊರೆಯುತ್ತಿಲ್ಲವೆಂದು ದೂರುಗಳು ಕೇಳಿ ಬರುತ್ತಿವೆ. ಸಕಾಲದಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣಗಳು ಒದಗಿಸುವ ಮೂಲಕ ರೈತರ ಉಪಯೋಗಕ್ಕೆ ಬರುವಂತೆ ಕ್ರಮ ವಹಿಸಲು ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯಾದ್ಯಂತ ಅಭಿಯಾನ ಕೈಗೊಂಡು ಅರ್ಹ ಕುಟುಂಬಗಳಿಗೆ ಜಾಬ್‍ಕಾರ್ಡ್ ಒದಗಿಸುವಂತೆ ಕ್ರಮ ಕೈಗೊಳ್ಳುವಂತೆ ಸಿ.ಇ.ಓ. ಅವರಿಗೆ ನಿರ್ದೇಶಿಸಿದರು.
ಜಿಪಂ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕನ್ಯಾಕುಮಾರಿ, ಶಾಸಕರುಗಳಾದ ಟಿ.ವೆಂಕಟರಮಣಯ್ಯ, ನಿಸರ್ಗ ನಾರಾಯಣಸ್ವಾಮಿ, ಡಾ.ಕೆ.ಶ್ರೀನಿವಾಸ್ ಮೂರ್ತಿ, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಜಿಲ್ಲಾಧಿಕಾರಿ ಕರೀಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಜೀತ್.ವಿ.ಜೆ ಮತ್ತಿತರರು ಉಪಸ್ಥಿತರಿದ್ದರು.